ಬೆಂಗಳೂರು: ಜನವರಿ 1ರಿಂದಲೇ ಶಾಲಾ-ಕಾಲೇಜು ಆರಂಭಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒಪ್ಪಿಗೆ ಸೂಚಿಸಿದ್ದಾರೆ.
ಸೋಮವಾರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶಾಲಾ-ಕಾಲೇಜು ಪ್ರಾರಂಭ ಕುರಿತು ಚರ್ಚಿಸಿ, ಜನವರಿಯಿಂದಲೇ ಶಾಲಾ-ಕಾಲೇಜು ಆರಂಭಿಸಲು ನಿರ್ಧರಿಸಲಾಯಿತು.
ಶಾಲಾ-ಕಾಲೇಜು ಆರಂಭಿಸಲು ಸಮಸ್ಯೆ ಇಲ್ಲ. ತಜ್ಞರು ಮುಂಜಾಗ್ರತಾ ಕ್ರಮ ಕೈಗೊಂಡು ಪ್ರಾರಂಭ ಮಾಡಲು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜನವರಿ 1ರಿಂದ ಶಾಲಾ-ಕಾಲೇಜು ಪ್ರಾರಂಭ ಮಾಡೋಣ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಂಪುಟ ಸಭೆಯಲ್ಲಿ ತಿಳಿಸಿದರು. ಶಿಕ್ಷಣ ಸಚಿವರ ಮಾತಿಗೆ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಒಪ್ಪಿಗೆ ಸೂಚಿಸಿದರು.
ಶಾಲಾ-ಕಾಲೇಜು ಆರಂಭಕ್ಕೆ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗೆ ಸೂಚನೆ ನೀಡಿ, ಶಾಲಾ-ಕಾಲೇಜುಗಳಲ್ಲಿ ಕೊರೊನಾ ಮಾರ್ಗಸೂಚಿಗಳು ಸರಿಯಾಗಿ ಪಾಲನೆ ಆಗಬೇಕು. ನಿಯಮ ಪಾಲನೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲೆಗಳನ್ನು ಆರಂಭಿಸುವ ನಿರ್ಧಾರಕ್ಕೆ ಸರಕಾರ ಬಂದಿದೆ. ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆತಂಕ ಸೃಷ್ಟಿಸಿದ್ದರೂ ಸಹ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಶಾಲಾ-ಕಾಲೇಜುಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ.