ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ವಿದ್ಯಾಗಮ ಯೋಜನೆಯಡಿ ಶೇಕಡಾ 80ರಷ್ಟು ಮಕ್ಕಳು ತರಗತಿಗಳಿಗೆ ಹಾಜರಾಗಿದ್ದು, ಯಾವೊಬ್ಬ ಶಿಕ್ಷಕರಿಗೂ ಕೊರೋನಾ ಸೋಂಕು ತಗುಲಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು; ಇದು ಅತ್ಯಂತ ಸಮಾಧಾನಕರ ಸಂಗತಿ. ಇದೇ ಸ್ಥಿತಿ ಕಾಯ್ದುಕೊಂಡು ಮುಂದೆ ಹೋಗಬೇಕು. ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಇದೇ ಪ್ರಗತಿಯನ್ನು ಕಾಯ್ದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆ ಆಗದಂತೆ ಬಸ್ಸುಗಳನ್ನು ಓಡಿಸಬೇಕು. ಹಾಗೆಯೇ ಬಿಸಿಯೂಟದ ಬದಲಾಗಿ ಮನೆಗೆ ನೀಡುತ್ತಿರುವ ಆಹಾರ ಧಾನ್ಯದ ವಿಷಯದಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು ಎಂದ ಅವರು, ಎಲ್ಲಾ ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಕಡ್ಡಾಯವಾಗಿ ಇರಲೇಬೇಕು. ಅದಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ವಿಷಯದಲ್ಲಿ ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ 500ರಿಂದ 600 ಕಿಲೋಮೀಟರ್ ಅಭಿವೃದ್ಧಿಗೆ ಲೋಕೋಪಯೋಗಿ ಸಚಿವರು ಸಮ್ಮತಿಸಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಹಿಂದೆಂದೂ ಈ ಪ್ರಮಾಣದಲ್ಲಿ ಹೆದ್ದಾರಿ ಅಭಿವೃದ್ಧಿ ಮಾಡಿರುವ ನಿದರ್ಶನ ಇಲ್ಲ ಎಂದು ಡಾ.ಸುಧಾಕರ್ ತಿಳಿಸಿದರು.