ಕೋಲಾರ: ಜಿಲ್ಲೆಯಲ್ಲಿ ಶನಿವಾರ ಏಳು ಕಡೆ ವ್ಯಾಕ್ಸಿನ್ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಾತ್ರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ತಿಳಿದ್ದಾರೆ.
ಜಿಲ್ಲೆಯಲ್ಲಿ ಏಳು ಕಡೆ ಕೋವಿಡ್ ವಾರಿಯರ್‌ಗಳಿಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದ್ದು. ಪ್ರತಿ ಒಂದು ಕೇಂದ್ರದಲ್ಲಿ ತಲಾ 100 ಜನರಿಗೆ ಮಾತ್ರ ಲಸಿಕೆ ನೀಡಲಾಗುತ್ತದೆ. ಈ ಲೆಕ್ಕದಲ್ಲಿ ಮೊದಲ ದಿನವೇ ಒಟ್ಟು 700 ಮಂದಿಗೆ ಕೊಡಲಾಗುತ್ತಿದೆ ಎಂದು ಅವರು ಹೇಳಿದರು.
ಲಸಿಕೆ ವಿತರಣೆ ಸಂಬಂಧ ತಮ್ಮ ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿದ ಅವರು; ಕೋಲಾರದ ಎಸ್‌ಎನ್‌ಆರ್ ಆಸ್ಪತ್ರೆ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ, ಬಂಗಾರಪೇಟೆಯ ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಮಾಲೂರು ತಾಲ್ಲೂಕಿನ ದೊಡ್ಡಶಿವಾರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಎಲ್ಲ ಕೇಂದ್ರಗಳಲ್ಲೂ ಲಸಿಕೆ ಸಂಗ್ರಹ, ವಿತರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪೊಲೀಸರಿಂದ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಎಲ್ಲ ಕೇಂದ್ರಗಳಿಗೂ ಲಸಿಕೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.
ಲಸಿಕೆ ಹಾಕಿಸಿಕೊಳ್ಳುವವರ ಮೊಬೈಲ್‌ಗೆ ಮೇಸೇಜ್ ಮೂಲಕ ಮಾಹಿತಿ ನೀಡಲಾಗುತ್ತದೆ. ಅಂತಹವರು ಮಾತ್ರ ತಮ್ಮ ಆಧಾರ್ ಕಾರ್ಡ್ ಜತೆಗೆ ಯಾವುದಾದರೂ ಒಂದು ಗುರುತಿನ ಚೀಟಿಯೊಂದಿಗೆ ಕೋವಿಡ್ ಲಸಿಕಾ ಕೇಂದ್ರಕ್ಕೆ ಬರಬೇಬೇಕು. ಜತೆಗೆ, ಲಸಿಕಾ ಕೇಂದ್ರದಲ್ಲಿ ಸ್ವಚ್ಛತೆ, ಕುಡಿಯುವ ನೀರು, ಸ್ಯಾನಿಟೈಜ್, ಚೇರು, ಟೇಬಲ್ ವ್ಯವಸ್ಥೆ ಇರಬೇಕು ಎಂದು ಡಿಸಿ ಅಧಿಕಾರಿಗಳಿಗೆ ಸೂಚಿಸಿದರು.
ಇನ್ನು ಲಸಿಕೆ ಹಾಕುವ ಸಂದರ್ಭದಲ್ಲಿ ಅಗತ್ಯ ತುರ್ತು ಸೇವೆಗಾಗಿ ಪ್ರತಿ ಲಸಿಕಾ ಕೇಂದ್ರಕ್ಕೆ ಒಂದರಂತೆ ಆಂಬ್ಯುಲೆನ್ಸ್ ವಾಹನದ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು. 9 ಕೇಂದ್ರಗಳ ಪ್ರತಿ ಕ್ಷಣದ ಮಾಹಿತಿಯನ್ನು ಆಯಾ ಕೇಂದ್ರಗಳ ನೋಡಲ್ ಅಧಿಕಾರಿಗಳು ಜಿಲ್ಲಾ ಕಂಟ್ರೋಲ್ ರೂಂಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.