ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಬಳಿಯ ಕ್ವಾರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಅವರು; ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಅಕ್ರಮ ಕ್ವಾರಿ-ಕ್ರಷರ್ಗಳ ವಿರುದ್ಧ ಕ್ರಮ ಜರುಗಿಸದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಜತೆ ಮಾಜಿ ಸಚಿವ-ಗೌರಿಬಿದನೂರು ಶಾಸಕ ಶಿವಶಂಕರ ರೆಡ್ಡಿ, ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮುಂತಾದವರು ಜತೆಯಲ್ಲಿದ್ದರು.
ಘಟನಾ ಸ್ಥಳಕ್ಕೆ ಭೇಟಿ ನೀಡುವುದಕ್ಕೂ ಮುನ್ನ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ
ಕೂಡಲೇ ಮುಖ್ಯಮಂತ್ರಿ ಆದೇಶ ನೀಡಬೇಕು. ಇದಕ್ಕಿಂತ ಮೊದಲು ಈ ಘಟನೆಗೆ ಕಾರಣರಾದ ಜಿಲ್ಲೆಯ ಎಲ್ಲ ಅಧಿಕಾರಿಗಳನ್ನು ಅಮಾನತ್ತಿನಲ್ಲಿಟ್ಟು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.
ರಾಜ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರ ಪ್ರದೇಶದ ಗಣಿಲೂಟಿಕೋರರಿಗೂ ನೇರವಾದ ಸಂಬಂಧ ಇದೆ. ವಿಧಾನಸೌಧದಿಂದ ಜಿಲ್ಲಾಮಟ್ಟದ ವರೆಗೆ ಎಲ್ಲರೂ ಇದರಲ್ಲಿ ಷಾಮೀಲಾಗಿದ್ದಾರೆ. ಚಿಕ್ಕಬಳ್ಳಾಪುರದ ಈ ಅಕ್ರಮ ಗಣಿಗಾರಿಕೆ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ಅವರ ಗಮನಕ್ಕೆ ಬಂದಿರಲಿಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ 2000ಕ್ಕೂ ಹೆಚ್ಚು ಅನಧಿಕೃತ ಕ್ರಷರ್, ಕ್ವಾರಿಗಳಿವೆ ಎಂದು ಹೇಳಲಾಗುತ್ತಿದೆ. ಇವುಗಳ ಪಟ್ಟಿಯನ್ನು ಮುಖ್ಯಮಂತ್ರಿ ತಕ್ಷಣ ಬಿಡುಗಡೆಗೊಳಿಸಬೇಕು ಮತ್ತು ಅವುಗಳನ್ನು ನಿರ್ದಾಕ್ಷಿಣ್ಯವಾಗಿ ಮುಚ್ಚುವ ಕೆಲಸ ಶುರು ಮಾಡಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ.
- ಸ್ಫೋಟ ದುರಂತದ ಸುದ್ದಿ ಓದಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ..