ಬೆಂಗಳೂರು: ಆರ್ಥಿಕ ಸಂಕಷ್ಟದ ಸಮಯದಲ್ಲಿ ಸರ್ವರಿಗೂ ಲೇಸನ್ನೇ ಬಯಸುವ ಬಜೆಟ್ ಅನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು; ಕೋವಿಡ್ ಇದ್ದ ಕಾರಣಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಸಂಪನ್ಮೂಲ ಸಂಗ್ರಹ ಆಗಿಲ್ಲ. ಹೀಗಾಗಿ ಸಿಎಂ ಅವರು ಸಂಪನ್ಮೂಲಗಳ ಇತಿ-ಮಿತಿಯಲ್ಲೇ ಕ್ಷೇತ್ರ, ಜಾತಿವಾರು ಕಲ್ಯಾಣ ಕಾರ್ಯಕ್ರಮಗಳನ್ನು ಪ್ರಕಟಿಸಿದ್ದಾರೆಂದು ಅವರು ಎಂದಿದ್ದಾರೆ.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಹಜವಾಗಿಯೇ ಇನ್ನೂ ಹೆಚ್ಚಿನ ಅನುದಾನ ನಿರೀಕ್ಷಿಸಲಾಗಿತ್ತು. ಆದರೆ, ಸೀಮಿತ ಸಂಪನ್ಮೂಲದಲ್ಲಿಯೇ ಅನುದಾನ ಹಂಚಿಕೆ ಮಾಡಿದ್ದಾರೆ ಮುಖ್ಯಮಂತ್ರಿಯವರು. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಸಿಗುವ ನಿರೀಕ್ಷೆ ಇದೆ ಎಂದು ಡಾ.ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರಕ್ಕೆ ಸಂಬಂಧಿಸಿದಂತೆ ಹೆಸರಾಂತ ನಂದಿ ಗಿರಿಧಾಮದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಹಾಗೆಯೇ, ಗೌರಿಬಿದನೂರು ತಾಲ್ಲೂಕಿನ ಹೊಸೂರಿನಲ್ಲಿ ಖ್ಯಾತ ಶಿಕ್ಷಣ ತಜ್ಞ ಎಚ್.ನರಸಿಂಹಯ್ಯ ಅವರ ನೆನಪಲ್ಲಿ ಸುಮಾರು 200 ಎಕರೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ವಿಜ್ಞಾನ ಕೇಂದ್ರ ಸ್ಥಾಪನೆ ಘೋಷಣೆ ಮಾಡಲಾಗಿದೆ. ಇದಿಷ್ಟು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳು ನೀಡಿರುವ ಕೊಡುಗೆ ಎಂದು ಸಚಿವರು ಹೇಳಿದ್ದಾರೆ.