ಬೆಂಗಳೂರು/ಚಿಕ್ಕಬಳ್ಳಾಪುರ: ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬಹುದು. ಇದರಿಂದಾಗಿ ಹೆಚ್ಚಿನ ಜನರಿಗೆ ಲಸಿಕೆ ನೀಡಬಹುದು. ಎಲ್ಲರೂ ಕೂಡಲೇ ಕೋವಿಡ್ ಪೋರ್ಟಲ್ʼನಲ್ಲಿ ಹೆಸರು ನೋಂದಾಯಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸಚಿವರು; ಪ್ರತಿಯೊಬ್ಬರೂ ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ
ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ
ರಾಜ್ಯದಲ್ಲಿ ಕೋವಿಡ್ ಲಸಿಕೆಗೆ ಯಾವುದೇ ಕೊರತೆಯಾಗುವುದಿಲ್ಲ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದು ಡಾ.ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹನ್ನೆರಡೂವರೆ ಲಕ್ಷ ಡೋಸ್ ಕೋವಿಡ್ ಲಸಿಕೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿದೆ. ಮುಂದಿನ ವಾರದೊಳಗೆ ರಾಜ್ಯಕ್ಕೆ ಬರಲಿದೆ. ಆದರೆ ಅದಕ್ಕೆ ಮುನ್ನ ಹೆಚ್ಚುವರಿಯಾಗಿ 4 ಲಕ್ಷ ಡೋಸ್ ಗಳನ್ನು ವಿಮಾನದಲ್ಲಿ ಕಳುಹಿಸಲಾಗುತ್ತಿದೆ. ಲಸಿಕೆಗೆ ಯಾವುದೇ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವರು ತಿಳಿಸಿದ್ದಾರೆ” ಎಂದರು.
ಕೋವಿಡ್ ಎರಡನೇ ಅಲೆ ಇದೆ. ಅನೇಕ ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಾಗರಿಕರು ಕೂಡ ಕೋವಿಡ್ ಸುರಕ್ಷತಾ ಕ್ರಮ ಅನುಸರಿಸಬೇಕು ಎಂಬುದನ್ನು ಅರಿಯಬೇಕು. ಅನಗತ್ಯವಾಗಿ ಗುಂಪುಗೂಡುವುದು, ಮಾಸ್ಕ್ ಧರಿಸದಿರುವುದು ಮೊದಲಾದ ಕ್ರಮಗಳಿಗೆ ಈಗಾಗಲೇ ಕಡಿವಾಣ ಹಾಕಲಾಗಿದೆ. ಸಭೆ, ಸಮಾರಂಭಗಳನ್ನು 2 ತಿಂಗಳ ಮಟ್ಟಿಗೆ ಮುಂದೂಡಬೇಕು ಎಂದು ಡಾ.ಸುಧಾಕರ್ ಕೋರಿದರು.