ಬಾಗೇಪಲ್ಲಿ: ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಭಯಗೊಳ್ಳುತ್ತಿದ್ದಾರೆ. ಮತ್ತೆ ಕೆಲವರು ಅಸಡ್ಡೆಯನ್ನೇ ಮುಂದುವರಿಸಿದ್ದಾರೆ. ಇಂತಹ ಬೆಳವಣಿಗೆ ಒಳ್ಳೆಯದಲ್ಲ ಎಂದು ಶಾಸಕ ಎಸ್.ಸುಬ್ಬಾರೆಡ್ಡಿ ಹೇಳಿದ್ದಾರೆ.
ತಾಲೂಕಿನ ಗೂಳೂರು ಗ್ರಾಮದ ಪಿ.ಡಿ.ಎಫ್ ಕಲ್ಯಾಣ ಮಂಟಪದಲ್ಲಿ ಆಡಳಿತ ಹಾಗೂ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕೊರೋನಾ ವ್ಯಾಕ್ಸಿನ್ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಂದೆಡೆ ರಾಜ್ಯದಲ್ಲಿ ಕೊರೋನಾ ವೈರಸ್ ಎರಡನೇ ಅಲೆಯ ಅಬ್ಬರ ಜೋರಾಗಿದೆ. ಇನ್ನೊಂದೆಡೆ ದೇಶಾದ್ಯಂತ ಇಂದಿನಿಂದ ಮೂರನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಕೋವಿಡ್ ವ್ಯಾಕ್ಸಿನ್ ನೀಡಲಾಗುತ್ತಿದ್ದು, ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು ಎಂದರು.
ಈ ಸಂದರ್ಭದಲ್ಲಿ ಜನ ಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಅವರು ಮನವಿ ಮಾಡಿದರು. ಹಾಗೆಯೇ, ಯಾರೇ ಜನ ಪ್ರತಿನಿಧಿಗಳು ವ್ಯಾಕ್ಸಿನ್ ಬಗ್ಗೆ ಹೆಚ್ಚು ಪ್ರಚಾರ ನಡೆಸುತ್ತಾರೋ ಅಂತಹ ಜನ ಪ್ರತಿನಿಧಿಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಸತ್ಯನಾರಾಯಣ ರೆಡ್ಡಿ, ತಹಶಿಲ್ದಾರ್ ಡಿ.ಎ.ದಿವಾಕರ್, ತಾಲೂಕು ಪಂಚಾಯತಿ ಇಓ ಮಂಜುನಾಥ ಸ್ವಾಮಿ, ತಾಲೂಕು ಪಂಚಾಯತಿ ಅಧ್ಯಕ್ಷ ನರೇಂದ್ರ ಬಾಬು, ಜಿಲ್ಲಾ ಪಂಚಾಯತಿ ಸದಸ್ಯ ಲಕ್ಷ್ಮೀನರಸಿಂಹಪ್ಪ, ಗೂಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ವೆಂಕಟರಾಯಪ್ಪ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಎಸ್.ಎಸ್.ರಮೇಶ್ ಬಾಬು, ಪಿ.ಡಿ.ಓ ಬಾಗ್ಯಲಕ್ಷ್ಮೀ ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.