ಬೆಂಗಳೂರು: ಇದೇ ಏಪ್ರಿಲ್ 28ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಕ್ಟಿಕಲ್ (ಪ್ರಾಯೋಗಿಕ) ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ವಿಷಯವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್.ಸುರೇಶ್ ಕುಮಾರ್ ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಕೋವಿಡ್ ಎರಡನೇ ಅಲೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಗುವುದು ಎಂದಿದ್ದಾರೆ.
ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿಗಳ ಹಂತದಲ್ಲಿ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ವಿದ್ಯಾರ್ಥಿಗಳ ಹಿತ ಕಾಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗಬೇಕಿಲ್ಲ. ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ಮಾಡಿದ್ದಾರೆ.