ಕೋವಿಡ್ ಸಂಕಷ್ಟದಲ್ಲಿ ನೆಮ್ಮದಿಯ ಸುದ್ದಿ ಕೊಟ್ಟ ಕೇಂದ್ರ; 1.5 ಕೋಟಿ ವಿದ್ಯಾರ್ಥಿಗಳ ನಿಟ್ಟುಸಿರು
ನವದೆಹಲಿ/ಬೆಂಗಳೂರು: ಕೋವಿಡ್ 2ನೇ ಅಲೆಯ ಕಾರಣಕ್ಕೆ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ 2021ನೇ ಸಾಲಿನ ಸಿಬಿಎಸ್ಇ 12ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.
ಆದರೆ, ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದ ರಾಜ್ಯ ಸರಕಾರ, ಶೀಘ್ರದಲ್ಲಿಯೇ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದೆ.
ಪಿಎಂ ನೇತೃತ್ವದ ಸಭೆಯಲ್ಲಿ ನಿರ್ಧಾರ
ನವದೆಹಲಿಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಿಬಿಎಸ್ಇ 12ನೇ ತರಗತಿಯ ಪರೀಕ್ಷೆಯನ್ನು ರದ್ದು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಪ್ರಧಾನಿ ಅವರು ಟ್ವೀಟ್ ಮಾಡಿರುವ ಜತೆಗೆ, ಅವರ ಕಚೇರಿಯೂ ಪ್ರಕಟಣೆ ಹೊರಡಿಸಿದೆ.
ಈ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳ ಜತೆಗೆ ಅವರ ಪೋಷಕರು, ಬೋಧಕರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಈ ಕ್ಲಿಷ್ಟ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಬಲವಂತವಾಗಿ ಪರೀಕ್ಷೆಗೆ ಕೂರಿಸುವುದು ಸರಿಯಲ್ಲ ಎಂದು ಪ್ರಧಾನಿ ಹೇಳಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಕರ್ನಾಟಕ ಏನು ಮಾಡುತ್ತದೆ?
ಇನ್ನೂ ಈವರೆಗೆ ದ್ವಿತೀಯ ಪಿಯುಸಿ ಮತ್ತು ಎಸ್‌ಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಯಾವುದೇ ನಿರ್ಧಾರ ಬರದ ರಾಜ್ಯ ಸರಕಾರ ಸೂಕ್ತ ರೀತಿಯಲ್ಲಿ ಪರಿಶೀಲನೆ ಮಾಡಿ ಶೀಘ್ರ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್, ರಾಜ್ಯ ಪಠ್ಯಕ್ರಮ ಅನುಸರಿಸಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.