ಕರಡು ಕ್ರಿಯಾಯೋಜನೆ ತಯಾರಿಸುವಂತೆ 35 ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಕಲ್ಯಾಣಕ್ಕಾಗಿ 2021-22ನೇ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ 26,005 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ.
ಶೀಘ್ರದಲ್ಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ರಾಜ್ಯ ಪರಿಷತ್ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮಂಡಿಸಲು ತ್ವರಿತವಾಗಿ ಕರಡು ಕ್ರಿಯಾಯೋಜನೆ ತಯಾರಿಸುವಂತೆ ನೊಡೆಲ್ ಏಜೆನ್ಸಿಗಳಾಗಿರುವ 35 ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಈ ಎಲ್ಲ ನೊಡೆಲ್ ಏಜೆನ್ಸಿಗಳ ಅಧ್ಯಕ್ಷರೂ ಆಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಸೂಚಿಸಿದರು.
ವಿಕಾಸಸೌಧದಲ್ಲಿ ನಡೆದ ಎರಡು ದಿನಗಳ ಅವಧಿ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಸಾಲಿನ ಆರ್ಥಿಕ ಹಾಗೂ ಭೌತಿಕ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ಕಳೆದ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯ 25916 ಕೋಟಿ ರೂ. ಅಂತಿಮವಾಗಿ ಹಂಚಿಕೆಯಾಗಿತ್ತು, ಅದರಲ್ಲಿ 24568 ಕೋಟಿ ರೂ. (ಶೇ.95) ಅನ್ನು ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ಖರ್ಚು ಮಾಡಲಾಗಿದೆ. ಈ 35 ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಅನುಕೂಲವಾಗುವಂಥ ಯೋಜನೆ / ಕಾರ್ಯಕ್ರಮಗಳ ಕರಡು ಕ್ರಿಯಾ ಯೋಜನೆಯನ್ನು ಸಿದ್ದಪಡಿಸಬೇಕು. ಎಲ್ಲಾ ಇಲಾಖೆಗಳ ಕ್ರೋಢೀಕೃತ ಕರಡು ಕ್ರಿಯಾಯೋಜನೆಯನ್ನು ಶೀಘ್ರವಾಗಿ ಸಲ್ಲಿಸಬೇಕು ಎಂದರು.
ಈ ಕರಡು ಕ್ರಿಯಾ ಯೋಜನೆಯನ್ನು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ರಾಜ್ಯ ಪರಿಷತ್ ಸಭೆಯಲ್ಲಿ ಮಂಡಿಸಿ, ಅಂತಿಮವಾಗಿ ಅನುಮೋದನೆ ನೀಡಲಾಗುವುದು. ಸದ್ಯದಲ್ಲೇ 2021-22ನೇ ಸಾಲಿನ ಕ್ರಿಯಾಯೋಜನೆಗೆ ಅನುಮೋದನೆಗೆ ಕ್ರಮ ವಹಿಸಲಾಗುವುದು. ಈಗಾಗಲೇ ಹಿಂದಿನ ವರ್ಷಗಳಂತೆ ಎಸ್ಸಿಎಸ್ಪಿ ಮತ್ತು ಟಿಎಸ್ಪಿಯ ಮೊದಲನೇ ತ್ರೈಮಾಸಿಕ ಅನುದಾನವನ್ನು ವೆಚ್ಚ ಮಾಡಲು ಎಲ್ಲಾ ಇಲಾಖೆಗಳಿಗೆ ಅನುಮತಿ ನೀಡಲಾಗಿದ್ದು, ಈ ಎಲ್ಲಾ ಇಲಾಖೆಗಳು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ವಿಳಂಬ ಮಾಡದೇ ಯೋಜನೆಗಳ ಅನುಷ್ಠಾನಗೊಳಿಸಬೇಕು ಎಂದು ಅವರು ಸೂಚಿಸಿದರು.
ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಸರಕಾರ ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗಳನ್ನು ಸಮುದಾಯವು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿಯಾಗಬೇಕು ಎಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ.ಎನ್.ನಾಗಾಂಬಿಕಾ ದೇವಿ, ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯ ಸಲಹೆಗಾರ ವೆಂಕಟಯ್ಯ, ನೀರಾವರಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರವಿಕುಮಾರ್ ಸುರಪುರ್, ಸಮಾಜ ಕಲ್ಯಾಣ ಇಲಾಖೆಯ ಸಚಿವರ ಆಪ್ತ ಕಾರ್ಯದರ್ಶಿ ರಾಘವೇಂದ್ರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಪಿ.ಎಸ್.ಕಾಂತರಾಜು, ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕೋಶದ ನಿರ್ದೇಶಕಿ ಊರ್ಮಿಳಾ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಉಪಸ್ಥಿತರಿದ್ದರು. ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.