ಮೈಸೂರು: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಆಗ್ರಹಿಸಿ ರಕ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ʼಜಾಗೋ ಮೈಸೂರುʼ ಅಧ್ಯಕ್ಷ ಚೇತನ್ ಮಂಜುನಾಥ್ ಪತ್ರ ಬರೆದಿದ್ದಾರೆ.
ಚೇತನ್ ತಮ್ಮ ಮೂವತ್ತಾರನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ರಕ್ತದಲ್ಲಿ ಪತ್ರ ಬರೆದು ಪೋಸ್ಟ್ ಮಾಡಿದ್ದಾರೆ.
ಮೇ 2ರಂದು ಅಲ್ಲಿಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಂದ ದಿನದಿಂದ ಇಲ್ಲಿಯವರೆಗೂ ತೃಣಮೂಲ ಕಾಂಗ್ರೆಸ್ಸಿನ ಕಾರ್ಯಕರ್ತರು ಮತ್ತು ಅಲ್ಲಿಯ ಮೂಲಭೂತವಾದಿಗಳು 30 ಬಿಜೆಪಿ ಕಾರ್ಯಕರ್ತರು ಮತ್ತು ಅಮಾಯಕ ಹಿಂದೂಗಳನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಸುಮಾರು 7 ಸಾವಿರ ಹಿಂದೂ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಸುಮಾರು 15,000 ಪ್ರಕರಣಗಳು ದಾಖಲಾಗಿವೆ. 1 ಲಕ್ಷಕ್ಕೂ ಹೆಚ್ಚು ಜನ ಪ್ರಾಣಭಯದಿಂದ ಪಕ್ಕದ ರಾಜ್ಯಗಳಿಗೆ ವಲಸೆ ಹೋಗಿದ್ದಾರೆಂದು ಪತ್ರದಲ್ಲಿ ಅವರು ಬರೆದಿದ್ದಾರೆ.
ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರಕಾರ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಲ್ಲದೆ ಈ ಎಲ್ಲಾ ಹಿಂಸೆಗಳಿಗೆ ಪರೋಕ್ಷ ಬೆಂಬಲವನ್ನು ನೀಡಿ ಕಣ್ಣುಮುಚ್ಚಿ ಕುಳಿತಿದೆ ಎಂದು ಬರೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಅಲ್ಲಿಯ ಅಮಾಯಕ ಹಿಂದೂಗಳು ಮತ್ತು ಬಿಜೆಪಿ ಕಾರ್ಯಕರ್ತರ ರಕ್ಷಣೆ ಮಾಡಲು ರಾಷ್ಟ್ರಪತಿ ಆಳ್ವಿಕೆ ಒಂದೇ ಮಾರ್ಗವಾಗಿದೆ. ಆದ್ದರಿಂದ ತಕ್ಷಣ ಪ್ರಧಾನಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಚೇತನ್ ಒತ್ತಾಯಿಸಿ ತಮ್ಮ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ನೊಂದ ಎಲ್ಲ ಸಂತ್ರಸ್ತರಿಗೆ ವಿಶೇಷ ಹಣಕಾಸು ಪ್ಯಾಕೇಜ್ ಘೋಷಿಸಬೇಕು ಮತ್ತು ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ.