ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಗಡಿಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ರಮ ಮಾರಾಟಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದರಿಂದ ಯುವಕರು ಮದ್ಯದ ಅಮಲಿಗೆ ಒಳಗಾಗುತ್ತಾರೆ. ಅಕ್ರಮ ಮದ್ಯ ಮಾರಾಟದ ವಿರುದ್ಧ ಪೊಲೀಸ್ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪ್ರಕರಣ ದಾಖಲಿಸುತ್ತಿದ್ದಾರೆ. ಆದರೆ ಅಬಕಾರಿ ಇಲಾಖೆಯವರು ನಿರೀಕ್ಷಿತ ಮಟ್ಟದಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಮಿತಿಯ ಸದಸ್ಯರು ಸಭೆಯಲ್ಲಿ ದೂರಿದರು. ಈ ಹಿನ್ನಲೆಯಲ್ಲಿ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಡಿಸಿಯವರು ಸೂಚಿಸಿದರು.
- ಕಳೆದ ಜೂನ್ ಹತ್ತರಂದೇ ಗಡಿಭಾಗದಲ್ಲಿ ಅಕ್ರಮ ಮದ್ಯದ ಹೊಳೆ ಹರಿಯುತ್ತಿದೆ ಎಂಬ ಬಗ್ಗೆ ಸಿಕೆನ್ಯೂಸ್ ನೌ ವರದಿ ಮಾಡಿತ್ತು. ಆ ವರದಿ ಓದಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ..
ಗುಡಿಬಂಡೆ ಹಳೆಯ ಕೋರ್ಟ್ ಕಟ್ಟಡದಲ್ಲಿ ತ್ಯಾಜ್ಯ
ಸಮಿತಿಯ ಸದಸ್ಯ ಜಿ.ವಿ.ವಿಶ್ವನಾಥ್ ಅವರು ಮಾತನಾಡಿ, ಗುಡಿಬಂಡೆಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಳೆಯ ಕೋರ್ಟ್ ಕಟ್ಟಡವು ಖಾಲಿಯಿದ್ದು, ಅಲ್ಲಿ ಸ್ವಚ್ಛತೆ ಮರಿಚೀಕೆಯಾಗಿದೆ , ಈ ಜಾಗವನ್ನು ಯಾವುದಾದರೂ ಒಂದು ಸರ್ಕಾರಿ ಕಚೇರಿಯ ಕೆಲಸಕ್ಕೆ ಅಥವಾ ಕಚೇರಿಗೆ ಬಳಸಿಕೊಂಡರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಈ ಬಗ್ಗೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ಗುಡಿಬಂಡೆ ತಹಸೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸಂಬಂಧಿಸಿದ ಸ್ಮಶಾನಗಳ ದಾರಿ, ಪರಿಶಿಷ್ಟರ ಜಮೀನುಗಳ ಖಾತೆ ಬಗ್ಗೆ ,ಜಮೀನು ಒತ್ತುವರಿ, ಅಂಬೇಡ್ಕರ್ ಭವನ, ವಾಲ್ಮೀಕಿ ಭವನಗಳಿಗೆ ಜಮೀನು ಮಂಜೂರು,ಬಾಲ್ಯವಿವಾಹ, ಪರಿಶಿಷ್ಟರ ಮೇಲಿನ ದೌರ್ಜನ್ಯ ಸೇರಿದಂತೆ ಇತರೆ ವಿಷಯಗಳ ಕುರಿತ ದೂರಿನ ವಿವರ ಪಡೆದು ಈ ಎಲ್ಲಾ ವಿಷಯಗಳ ಬಗ್ಗೆ ಅಗತ್ಯ ಕ್ರಮ ಕೈಗೊಂಡು ಇತ್ಯರ್ಥ ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜ್ ಆನಂದ್ ರೆಡ್ಡಿ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಸಿ.ವಿ.ಲಕ್ಷ್ಮಣ್ ರಾಜ್, ಜಿ.ವೆಂಕಟರಮಣಪ್ಪ, ಎಸ್.ಎನ್.ಅಂಜಿನಪ್ಪ, ವಿ.ಶ್ರೀನಿವಾಸ್, ಜಿ.ವಿ.ವಿಶ್ವನಾಥ್, ಮಂಜುಳಾ, ಗಂಗಾಧರ್, ಸುಧಾಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.