ಕೇಂದ್ರದಿಂದ ಡಿಪಿಆರ್‌ಗೆ ಒಪ್ಪಿಗೆ ಸಿಕ್ಕ ತಕ್ಷಣ ಕಾಮಗಾರಿ ಆರಂಭ
ಬೆಂಗಳೂರು: ಮೇಕೆದಾಟು ಯೋಜನೆಯ ಬಗ್ಗೆ ರಾಜ್ಯ ಸರಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಈ ಯೋಜನೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಆರಂಭ ಮಾಡಿರುವ ಉಪವಾಸ ಸತ್ಯಾಗ್ರಹ ಮಾಡುತ್ತಿರುವುದಕ್ಕೂ ನಮಗೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಈ ವಿಷಯವನ್ನಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ. ಕೇವಲ ರಾಜಕಾರಣಕ್ಕಾಗಿಯೇ ಅಲ್ಲಿನ ನಾಯಕರು ಈ ಯೋಜನೆಯನ್ನು ವಿರೋಧ ಮಾಡುತ್ತಿದ್ದಾರೆ. ಆ ರಾಜ್ಯಕ್ಕೆ ಸಂಬಂಧಿಸಿದ ಯಾರೇ ಆದರೂ ಧರಣಿ-ಸತ್ಯಾಗ್ರಹ ಮಾಡಿದರೆ ಮೇಕೆದಾಟು ನಿಲ್ಲುವುದಿಲ್ಲ ಎಂದರು.
ಈ ಯೋಜನೆ ಪಾರದರ್ಶಕವಾಗಿದೆ. ಕುಡಿಯುವ ನೀರು, ವಿದ್ಯುತ್ ಉತ್ಪಾದನೆ ಹಾಗೂ ಕಷ್ಟಕಾಲದಲ್ಲಿ ನೀರು ಹಂಚಿಕೆ ಮಾಡಿಕೊಳ್ಳುವ ಉದ್ದೇಶದಿಂದ ಮಾತ್ರ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಬಗ್ಗೆ ಕೇಂದ್ರದ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಅವರು ಹೇಳಿದರು.
ಆದಷ್ಟು ಬೇಗ ಯೋಜನೆಯ ಸಮಗ್ರ ಯೋಜನಾ ವರದಿಗೆ (ಡಿಪಿಆರ್) ಕೇಂದ್ರದ ಒಪ್ಪಿಗೆ ಸಿಗಲಿದೆ. ಅದರ ಜತೆಯಲ್ಲೇ ಇತರೆ ಕ್ಲಿಯರೆನ್ಸ್‌ಗಳು ಕೂಡ ಸಿಗಲಿವೆ. ಅವೆಲ್ಲ ಸಿಕ್ಕಿದ ಕೂಡಲೇ ಯೋಜನೆಯ ಕಾಮಗಾರಿ ಆರಂಭ ಮಾಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.