ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆಯನ್ನು ತಳ್ಳಿಹಾಕಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ ತೈಲಗಳ ಮೇಲೆ ವಿಧಿಸಲಾಗುತ್ತಿರುವ ಯಾವುದೇ ತೆರಿಗೆ ಅಥವಾ ಸೆಸ್ ತೆಗೆಯುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದರು.
ನೆರೆಯ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಪೆಟ್ರೋಲ್ ಮೇಲಿನ ಸೆಸ್ ಕಡಿಮೆ ಮಾಡಿದ್ದು ಇದರಿಂದ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಕಡಿಮೆಯಾಗಿದೆ. ರಾಜ್ಯದ್ಲಲೂ ಮಾಡುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಂಥ ಯಾವ ಪ್ರಸ್ತಾವನೆಯೂ ರಾಜ್ಯ ಮುಂದಿಲ್ಲ ಎಂದರು.
ಅಲ್ಲದೆ, ರಾಜ್ಯದ ಅಭಿವೃದ್ಧಿಗೆ ಹಾಗೂ ಜನರ ಕಲ್ಯಾಣಕ್ಕಾಗಿ ಸಂಪನ್ಮೂಲಗಳ ಕೊರತೆ ಇದ್ದು ಅದ್ನನು ಸರಿದೂಗಿಸಿಕೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ ಇಳಿಸಲಾಗುವುದಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆ ದಿನ ಘೋಷಣೆ ಮಾಡಲಾದ ಎಲ್ಲ ಯೋಜನೆಗಳನ್ನು ಕೂಡಲೇ ಜಾರಿಗೆ ಆದೇಶ ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಜಾರಿಯಾಗಿರುವ ಎಲ್ಲ ಜನಪರ ಕಾರ್ಯಕ್ರಮಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಚುರುಕು ಮುಟ್ಟಿಸುವ ಕೆಲಸ ಆಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಯೋಜನೆಗಳಿಗೆ ಸಂಪನ್ಮೂಲ ಹೊಂದಸಬೇಕಿದೆ ಹಾಗೂ ಮೂಲಸೌಕರ್ಯ ಯೋಜನೆಗಳಿಗೆ ಹೆಚ್ಚು ಒತ್ತು ನೀಡಬೇಕಿದೆ. ಹೀಗೆ ಮಾಡುವ ಮೂಲಕ ಆರ್ಥಿಕತೆಗೆ ಶಕ್ತಿ ತುಂಬಲಾಗುವುದು ಎಂದರು ಅವರು.