ಸಿಎಂ, ಸಚಿವ ಡಾ.ಸುಧಾಕರ್ ಇದ್ದ ವೇದಿಕೆಯಲ್ಲಿ ಕನ್ನಡಕ್ಕೆ 3ನೇ ಸ್ಥಾನ
ಬೆಂಗಳೂರು: ಭಾನುವಾರ ನಡೆದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ೨೫ನೇ ಘಟಿಕೋತ್ಸವದಲ್ಲಿ ಕನ್ನಡಕ್ಕೆ ಅಪಮಾನ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು; “ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಹಾಗೂ ಸಂಸದರಿದ್ದ ವೇದಿಕೆಯಲ್ಲೇ ಕನ್ನಡವನ್ನು ಮೂರನೇ ಸ್ಥಾನಕ್ಕಿಳಿಸದಿರುವುದು ಅಕ್ಷಮ್ಯ” ಎಂದು ಅವರು ಹೇಳಿದ್ದಾರೆ.
ಅವರ ಟ್ವೀಟ್‌ನ ಪೂರ್ಣ ಪಾಠ ಇಲ್ಲಿದೆ..
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ೨೫ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ.
ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು ೩ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ.
ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ.
ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ?
ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ರಾಜಕಾರಣದಲ್ಲೂ ಕನ್ನಡಿಗರಿಗೆ ಪಂಗನಾಮ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ? ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು.
ಎಂದು ಕುಮಾರಸ್ವಾಮಿ ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.