ನಾಳೆ ಎರಡೂ ಜಿಲ್ಲೆಗಳಲ್ಲಿ ಮಳೆ ಹಾನಿ ವೀಕ್ಷಣೆ
By GS Bharath Gudibande
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಂತರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳ ಮಳೆ ಹಾನಿ ವೀಕ್ಷಣೆ ನಡೆಸಲಿದ್ದಾರೆ.
ಚಿಕ್ಕಬಳ್ಳಾಪುರವು ಇಡೀ ರಾಜ್ಯದಲ್ಲಿಯೇ ಅತೀ ಹೆಚ್ಚು ಮಳೆಹಾನಿಗೊಳಗಾದ 2ನೇ ಜಿಲ್ಲೆಯಾಗಿದ್ದು, ಸತತ ನಲವತ್ತೈದು ದಿನಕ್ಕೂ ಹೆಚ್ಚು ಕಾಲ ಸುರಿದ ಮಳೆಗೆ ತತ್ತರಿಸಿದೆ.
ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಾನಿಯಾದ ಪ್ರದೇಶಗಳನ್ನು ವೀಕ್ಷಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಾಳೆ ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡುವ ವೇಳೆ ವಿವಿಧ ಪ್ರದೇಶಗಳಿಗೆ ತೆರಳಲಿದ್ದಾರೆ.
ಮಧ್ಯಾಹ್ನ 3-30ಕ್ಕೆ ಚಿಕ್ಕಬಳ್ಳಾಪುರಕ್ಕೆ
ಬುಧವಾರ ಬೆಳಗ್ಗೆ 10 ಗಂಟೆಗೆ ಸಿದ್ದರಾಮಯ್ಯ ಅವರು ಕೋಲಾರಕ್ಕೆ ತೆರಳಲಿದ್ದು, ಜಿಲ್ಲೆಯ ನರಸಾಪುರ, ಬಂಗಾರಪೇಟೆ ಮತ್ತು ಕೋಲಾರಕ್ಕೆ ಭೇಟಿ ನೀಡಿ ಮಧ್ಯಾಹ್ನ 3.೩೦ ಗಂಟೆಗೆ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. ಅವರು ಚಿಕ್ಕಬಳ್ಳಾಪುರ ತಾಲೂಕಿನ ನುಗತ್ತಿಹಳ್ಳಿಯಲ್ಲಿ ಮಳೆ ಹಾನಿಯನ್ನು ವೀಕ್ಷಿಸಲಿದ್ದು, ಬಳಿಕ ಬೆಂಗಳೂರಿಗೆ ಮರಳಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋಲಾರ ಜಿಲ್ಲೆಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದರು. ಸಿಎಂ ಪ್ರವಾಸದ ಬೆನ್ನಲ್ಲೇ ಸಿದ್ದರಾಮಯ್ಯ ಅವರೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ.