ಕ್ರೈಂ ನಿಯಂತ್ರಣದಲ್ಲಿ ಜಿಲ್ಲೆ ಬೆಸ್ಟ್ ಎಂದ ಅರಗ ಜ್ಞಾನೇಂದ್ರ
by M Krishnappa Chikkaballapura
ಚಿಕ್ಕಬಳ್ಳಾಪುರ: ಸಮಾಜವು ಪೊಲೀಸ್ ವ್ಯವಸ್ಥೆ, ಠಾಣೆಗಳನ್ನು ಗೌರವದಿಂದ ನೋಡುವ ರೀತಿಯಲ್ಲಿ ಪೊಲೀಸರು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಿವಿಮಾತು ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಶುಇಕ್ರವಾರ ಗೃಹ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಹಾಗೂ ಜಿಲ್ಲೆಯಲ್ಲಿನ ಪೊಲೀಸ್ ವ್ಯವಸ್ಥೆಯ ಕಾರ್ಯವೈಖರಿ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲಾ ಪೊಲೀಸ್ ಇಲಾಖೆಯು ಸಮುದಾಯ ಪೋಲಿಸ್ ಕಾರ್ಯಕ್ರಮಗಳನ್ನು ಹಾಗೂ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಮಾಡುತ್ತಿದೆ ಎಂದ ಅವರು; ಖಾಕಿಗಳ ಕರ್ತವ್ಯ ನಿರ್ವಹಣೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಬೀಟ್ ವ್ಯವಸ್ಥೆಯನ್ನು ಬಲವರ್ಧನೆ ಮಾಡಬೇಕು. ಉತ್ತಮವಾಗಿ ಬೀಟ್ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗೆ ಸನ್ಮಾನಿಸಿ ಗೌರವಿಸಬೇಕು. ಪೋಲಿಸ್ ಪೇದೆಗಳು ಯಾಂತ್ರಿಕವಾಗಿ ಕೆಲಸ ಮಾಡದೆ ತಮ್ಮ ಹೊಣೆಗಾರಿಕೆಯನ್ನು ಅರಿತುಕೊಂಡು ಕೆಲಸ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಕಾನೂನುಬಾಹಿರ ಕೃತ್ಯಗಳೆಲ್ಲವನ್ನು ಮಟ್ಟಹಾಕಬೇಕು ಎಂದು ಗೃಹ ಸಚಿವರು ಎಚ್ಚರಿಸಿದರು.
ಪೊಲೀಸ್ ವ್ಯವಸ್ಥೆಯನ್ನು ಬಲವರ್ಧನೆ ಮಾಡುವ ಕುರಿತು ಅಗತ್ಯ ಸಲಹೆ ಸೂಚನೆಗಳನ್ನು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನೀಡಿದರು ಮತ್ತು ಜಿಲ್ಲೆಯಲ್ಲಿ ಅತ್ಯುತ್ತಮ ಸೇವೆ ಮಾಡಿದ 11 ಪೋಲಿಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಸಚಿವರು ಗೌರವಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಜಿಲ್ಲಾ ಪೊಲೀಸ್ ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆ ಸಮಗ್ರವಾಗಿ ಪಿಪಿಟಿ ಮುಖಾಂತರ ಸಚಿವರಿಗೆ ಮಾಹಿತಿ ಒದಗಿಸಿದರು.
ಈ ವೇಳೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.