ಸೋಮವಾರದಿಂದ ತರಗತಿಗಳು ಆರಂಭ
ಬೆಂಗಳೂರು: ರಾಜ್ಯ ಹೈಕೋರ್ಟ್ ಆದೇಶದ ಮೇರೆಗೆ ಸೋಮವಾರದಿಂದ ಶಾಲೆ ಕಾಲೇಜುಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಕಾಲೇಜುಗಳ ಮುತ್ತಮುತ್ತ ಕಟ್ಟೆಚ್ಚರ ವಹಿಸಲು ರಾಜ್ಯ ಸರಕಾರ ನಿರ್ಧರಿಸಿದೆ.
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಪ್ರಾಥಮಿಕ & ಪ್ರೌಢಶಿಕ್ಷಣ, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ.
ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಡಿಸಿ , ಎಸ್.ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದ ಮುಖ್ಯಾಂಶಗಳು
- ಸೋಮವಾರದಿಂದ ಪ್ರೌಢಶಾಲೆ ಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು.
- ಸೂಕ್ಷ್ಮ ಜಿಲ್ಲೆಗಳಲ್ಲಿ ಪ್ರಮುಖ ಶಾಲೆಗಳನ್ನು ಎಸ್.ಪಿ ಹಾಗೂ ಡಿ.ಸಿ ಗಳು ಭೇಟಿ ಮಾಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಅಹಿತಕರ ಘಟನೆಗಳು ಆಗದಂತೆ ಎಚ್ಚರ ವಹಿಸಿ
- ಶಾಲಾ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು ಹಾಗೂ ಆಡಳಿತ ಮಂಡಳಿಯೊಂದಿಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅವರು ನಿರಂತರ ಸಂಪರ್ಕ ಹೊಂದಿರಬೇಕು.
- ಜಿಲ್ಲೆಯ ಹಿರಿಯರು, ಪ್ರಮುಖರು, ಜನಪ್ರತಿನಿಧಿಗಳೊಂದಿಗೂ ಸಹ ನಿರಂತರ ಸಂಪರ್ಕ ಹೊಂದುವುದು.
- ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಶಾಂತಿ ಸಭೆಯನ್ನು ನಡೆಸಿ ಉಚ್ಚ ನ್ಯಾಯಾಲಯದ ಆದೇಶವನ್ನು ಅಕ್ಷರಶಃ ಪಾಲಿಸಬೇಕು.
- ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು.
- 8.ಯಾವುದೇ ಒತ್ತಡಕ್ಕೆ ಮಣಿಯಬಾರದು. ಸಣ್ಣ ಘಟನೆಯನ್ನೂ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು.
- ಆದ್ಯತೆ ಮೇರೆಗೆ ಕಾನೂನು ಸುವ್ಯವಸ್ಥೆ ಕಾಪಾಡುವುದು.
- ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸಭೆಗಳನ್ನು ನಡೆಸಬೇಕು.
- ಹೊರಗಿನ ಪ್ರಚೋದನಗೆ ಒಳಗಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರದೇಶಗಳನ್ನು ಹಂಚಿಕೆ ಮಾಡಿಕೊಂಡು ನಿಗಾ ವಹಿಸಬೇಕು.
- ಎಲ್ಲಾ ರಾಜಕೀಯ ಪಕ್ಷಗಳನ್ನು, ಧಾರ್ಮಿಕ ಮುಖಂಡರನ್ನು ಸ್ಥಳೀಯ ಅಧಿಕಾರಿಗಳು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.
- ಸಾಮಾಜಿಕ ಮಾಧ್ಯಮಗಳ ಮೂಲಕ ವದಂತಿ ಹಾಗೂ ಪ್ರಚೋದನಕಾರಿ ಸಂದೇಶಗಳು ಹರಡದಂತೆ ನಿಗಾ ವಹಿಸಿ.
- ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.
- ಪ್ರಾಂಶುಪಾಲರು ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಬೇಕು.
- ಪ್ರತಿಯೊಬ್ಬರೂ ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಒಂದು ಅಹಿತಕರ ಘಟನೆ ಜರುಗದಂತೆ ಕಟ್ಟೆಚ್ಚರ ವಹಿಸಬೇಕು.
- ಸಮಾಜಘಾತುಕ ಶಕ್ತಿಗಳನ್ನು ಗುರುತಿಸಿ ಅವರ ಮೇಲೆ ನಿಗಾ ವಹಿಸಲಾಗಿದೆ ಎಂಬ ಸಂದೇಶ ರವಾನಿಸಬೇಕು.
- ಮೇಲಿನಿಂದ ಯಾವುದೇ ಆದೇಶಗಳಿಗೆ ಕಾಯದೇ, ಸಂದರ್ಭಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಬೇಕು.
- ಮಾಧ್ಯಮಗಳಿಗೆ ಜಿಲ್ಲೆಗಳಲ್ಲಿನ ವಸ್ತುಸ್ಥಿತಿಯನ್ನು ಸರಿಯಾಗಿ ವಿವರಿಸಬೇಕು. ತಪ್ಪು ಮಾಹಿತಿ ಹೋಗದಂತೆ ಎಚ್ಚರ ವಹಿಸಬೇಕು.
ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಉಪಸ್ಥಿತರಿದ್ದರು.