ಸಂಪುಟದಿಂದ ಸಚಿವ ಈಶ್ವರಪ್ಪ ವಜಾಗೊಳಿಸುವಂತೆ ಆಗ್ರಹ
by GS Bharath Gudibande
ಗುಡಿಬಂಡೆ: ಗ್ರಾಮೀಣ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಗುಡಿಬಂಡೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಟ್ಟಣದ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಸಚಿವ ಈಶ್ವರಪ್ಪ ಅವರ ವಿರುದ್ಧ ಗ್ರೇಡ್-2 ತಹಶೀಲ್ದಾರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಈ ವೇಳೆ ಕಾಂಗ್ರೆಸ್ ಮುಖಂಡ ಪ್ರಕಾಶ್ ಮಾತನಾಡಿ; “ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಗೌರವ ಸ್ಥಾನದಲ್ಲಿರುವ ಸಚಿವ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಬೇಕು. ಕನಿಷ್ಠ ಬಿಜೆಪಿ ಪಕ್ಷವಾದರೂ ಅವರನ್ನು ಸಂಪುಟದಿಂದ ಹಾಗೂ ಪಕ್ಷದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದರು.
ನಂತರ ಹಿರಿಯ ಮುಖಂಡ ಕೃಷ್ಣೇಗೌಡ ಮಾತನಾಡಿ, “ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲ ಒಂದು ಗಲಭೆಗಳು ನಡೆಯುತ್ತಿವೆ. ವಾಜಪೇಯಿ ಅವರನ್ನು ನಾವೆಲ್ಲಾ ಪಕ್ಷಾತೀತವಾಗಿ ಗೌರವಿಸುತ್ತೇವೆ. ಅಂತಹ ಮಹಾನ್ ನಾಯಕರಿದ್ದ ಪಕ್ಷ ಇಂದು ಕೋಮುವಾದಿ ಪಕ್ಷವಾಗಿ ಮಾರ್ಪಾಡಾಗಿದೆ. ದೊಡ್ಡದೊಡ್ಡ ಹುದ್ದೆಗಳಲ್ಲಿ ಇರುವ ಸಚಿವರೇ ಬಾಲಿಶ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಹುದ್ದೆಗೆ ಅವರ ವರ್ತನೆಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಜನರೇ ಕಲಿಸಲಿದ್ದಾರೆ” ಎಂದರು.
ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು, ಗುಡಿಬಂಡೆ ಪಟ್ಟಣ ಪಂಚಾಯಿತಿ ಸದಸ್ಯರುಗಳು ಸೇರಿದಂತೆ ಎಲ್ಲಾ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.