• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಶಿವ ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ, ಅಭಿಷೇಕ ಪ್ರಿಯ

cknewsnow desk by cknewsnow desk
March 1, 2022
in GUEST COLUMN, STATE
Reading Time: 4 mins read
0
ಶಿವ ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ, ಅಭಿಷೇಕ ಪ್ರಿಯ

courtesy: Shri Kashi Vishwanath Temple Trust @ShriVishwanath

1k
VIEWS
FacebookTwitterWhatsuplinkedinEmail

ಇಂದು ಮಹಾ ಶಿವರಾತ್ರಿ

by Guruprasad hawaladar

ಸಾಮಾನ್ಯವಾಗಿ ಎಲ್ಲಾ ಹಬ್ಬಗಳಲ್ಲಿಯೂ ದೇವರಿಗೆ ಹಗಲು ಪೂಜೆ ನಡೆಯುತ್ತದೆ. ಆದರೆ ಶಿವರಾತ್ರಿ ಮಾತ್ರ ರಾತ್ರಿಯ ಹೊತ್ತು ಪೂಜೆ, ಭಜನೆ ನಡೆಸುವ ವಿಶೇಷ ಆಚರಣೆ. ರಾತ್ರಿ ಎಂದರೆ ಕತ್ತಲು, ಕತ್ತಲು ಎಂದರೆ ಅಜ್ಞಾನ. ಅಜ್ಞಾನವನ್ನು ಕಳೆದು ಸುಜ್ಞಾನ ಬೆಳಗಿಸು ಎಂದು ಆ ಶಿವನನ್ನು ಬೇಡುವ ಶುಭ ದಿನವೇ ಶಿವರಾತ್ರಿ. ಅಜ್ಞಾನ ತುಂಬಿರುವಲ್ಲಿ ಶಿವ ಸಂಚರಿಸಿ ಜ್ಞಾನ ದೀವಿಗೆಯನ್ನು ಬೆಳಗುತ್ತಾನೆ ಎಂಬ ನಂಬಿಕೆ ಇದೆ.

ಮಾಘ ಮಾಸದ ಬಹುಳ/ಕೃಷ್ಣ ಪಕ್ಷದಲ್ಲಿ ಚತುರ್ದಶಿಯಂದು ಆಚರಿಸುವ ಮಹಾಶಿವರಾತ್ರಿ ಹಬ್ಬ ಹಿಂದೂಗಳ ಪಾಲಿನ ಪ್ರಮುಖ ಹಬ್ಬ. ಹಗಲು ಪೂರ್ತಿ ಉಪವಾಸ ಇದ್ದು ರಾತ್ರಿ ಪೂರ್ತಿ ಜಾಗರಣೆ ಇದ್ದು ಶಿವಪೂಜೆ ನೆರವೇರಿಸುವುದರೊಂದಿಗೆ ಶಿವರಾತ್ರಿ ಆಚರಣೆ ಸಮಾಪ್ತಿಯಾಗುತ್ತದೆ.

ಈ ದಿನ ಬೆಳಗ್ಗೆ ಮಂಗಳ ಸ್ನಾನ ಮಾಡಿ, ಈಶ್ವರನಿಗೆ ಷೋಡಶೋಪಚಾರದಿಂದ ಪೂಜೆ ಮಾಡುತ್ತಾರೆ. ಬಿಲ್ವಪತ್ರೆ ಈಶ್ವರನಿಗೆ ಪ್ರಿಯವಾದುದ್ದು, ಇದರ ಒಂದು ಎಲೆಯನ್ನು ಶಿವನಿಗೆ ಅರ್ಪಿಸಿದರೂ ನಾನಾ ಪುಣ್ಯಗಳಿಗೆ ಪಾತ್ರರಗುತ್ತೀವಿ ಎಂಬ ನಂಬಿಕೆ ಇದೆ. ಶಿವಲಿಂಗಕ್ಕೆ ಪಂಚಾಮೃತ ಮತ್ತು ಬಿಲ್ವ ಪತ್ರೆ ಸಮರ್ಪಣೆ ಮಾಡುತ್ತಾರೆ. ಸಾಮಾನ್ಯವಾಗಿ ಇಡೀ ದಿನ ಉಪವಾಸವಿದ್ದು, ರಾತ್ರಿ ಜಾಗರಣೆ ಮಾಡಿ ಮಾರನೆಯ ದಿನ ಪಾರಣ, ಉಪವಾಸ ಮಾಡಲು ಆಗದಿದ್ದರೆ, ಫಲಹಾರ ಮಾಡುತ್ತಾರೆ.

ಶಿವರಾತ್ರಿ ಎಂಬ ಹೆಸರಿಗೆ ತಕ್ಕಂತೆ ಹಗಲಿನ ಜೊತೆಗೆ ರಾತ್ರಿಯೂ ಶಿವನ ಪೂಜೆ ಆರಾಧನೆ ಮಾಡುತ್ತಾರೆ. ಜಾವ (ಯಾಮ) – ದಿವಸದ ಎಂಟನೆಯ ಒಂದು ಭಾಗದಷ್ಟು ಕಾಲ, ಮೂರು ಗಂಟೆ ಕಾಲ ಎಂದರ್ಥ. ರಾತ್ರಿಯ 4 ಜಾವಗಳಲ್ಲೂ ಈಶ್ವರನಿಗೆ ಅಭಿಷೇಕ ಪೂಜೆ ಮಾಡುತ್ತಾರೆ. ಈಶ್ವರನ ಭಜನೆ, ಹಾಡು, ಸ್ತೋತ್ರಗಳನ್ನು ಹೇಳುತ್ತಾ ಜಾಗರಣೆ ಮಾಡುತ್ತಾ, ಹೀಗೆ ದಿನವಿಡೀ ಶಿವನ ಧ್ಯಾನದಲ್ಲಿ ಕಳೆಯುತ್ತಾ, ಶಿವ ದೇವಾಲಯಗಳಲ್ಲಿ ಇಡೀ ರಾತ್ರಿ ಪೂಜೆ, ಭಜನೆ ಮಾಡುತ್ತಾ ಕೈಲಾಸವಾಸ ಪರಶಿವನನ್ನು ನೆನೆದು ಪುನೀತರಾಗುತ್ತಾರೆ. ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ.

ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ. ಶಿವಪುರಾಣದಲ್ಲಿ ಶಿವರಾತ್ರಿಯ ಆಚರಣೆ ಬಂದಿರುವ ಬಗ್ಗೆ ಒಂದು ಸಣ್ಣ ಕಥೆ ಇದೆ.

  • ಶ್ರೀ ಕಾಶಿ ವಿಶ್ವನಾಥ, ಉಜ್ಜಯನಿ ಶ್ರೀ ಮಹಾಬಲೇಶ್ವರ, ಶ್ರೀ ಸೋಮನಾಥೇಶ್ವರ, ಶ್ರೀ ಕೇದಾರನಾಥ, ಶ್ರೀ ಗೋಕರ್ಣ ಮಹಾಬಲೇಶ್ವರ ಸ್ವಾಮಿ ಆತ್ಮಲಿಂಗ, ಶ್ರೀ ಓಂಕಾರೇಶ್ವರ.
ಶಿವಪುರಾಣದಲ್ಲಿ ಶಿವರಾತ್ರಿ

ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾ, ವಿಷ್ಣು ಹಾಗೂ ಬ್ರಹ್ಮರ ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ಸೂಚಿಸುತ್ತಾನೆ.

ಆಗ ಹಂಸದ ರೂಪ ತಾಳಿದ ಬ್ರಹ್ಮ ಅಗ್ನಿಕಂಭದ ಶಿರವನ್ನು ಹುಡುಕಲು ಮೇಲ್ಮುಖವಾಗಿ ಹೊರಡುತ್ತಾನೆ. ವಿಷ್ಣು ವರಾಹಾವತಾರ ತಾಳಿ ಕಂಭದ ತಳವನ್ನು ನೋಡುವುದಕ್ಕಾಗಿ ಪಾತಾಳಕ್ಕೆ ಇಳಿಯುತ್ತಾನೆ. ಎಷ್ಟೇ ಮುಂದೆ ಸಾಗಿದರೂ ಬ್ರಹ್ಮ ಹಾಗೂ ವಿಷ್ಣು ಇವರಿಬ್ಬರಿಗೂ ಕಂಭದ ಅಂತ್ಯವೇ ಕಾಣುವುದಿಲ್ಲ. ಅನಂತವಾಗಿರುವ ಶಿವನ ಶಕ್ತಿಯನ್ನು ನೋಡಿದ ವಿಷ್ಣು ಹಾಗೂ ಬ್ರಹ್ಮರಿಗೆ ಸತ್ಯದ ಅರಿವಾಗುತ್ತದೆ.

ಆದರೆ ಶಿವನ ಜಡೆಯಿಂದ ಕೆಳಗೆ ಬೀಳುತ್ತಿದ್ದ ಕೇತಕಿ ಪುಷ್ಪದ ಬಳಿ ಬ್ರಹ್ಮ ನೀನು ಎಲ್ಲಿಂದ ಬೀಳುತ್ತಿದ್ದೀಯ ಎಂದು ಪ್ರಶ್ನಿಸುತ್ತಾನೆ. ಆಗ ಆ ಪುಷ್ಪವು ನಾನು ಅಗ್ನಿ ಕಂಭದ ಶಿರದಿಂದ ಬೀಳುತ್ತಿದ್ದೇನೆ ಎಂಬ ಉತ್ತರ ನೀಡುತ್ತದೆ. ಆಗ ಬ್ರಹ್ಮ ಶಿವನಲ್ಲಿಗೆ ಬಂದು ಕೇತಕಿ ಪುಪ್ಪವನ್ನು ತೋರಿಸಿ, ತಾನು ಅಗ್ನಿ ಕಂಭದ ಶಿರಭಾಗವನ್ನು ನೋಡಿರುವುದಾಗಿಯೂ ಅಲ್ಲಿಂದಲೇ ಕೇತಕಿ ಪುಷ್ಪವನ್ನು ತಂದಿರುವುದಾಗಿಯೂ ಹೇಳುತ್ತಾನೆ.

ಇವರಿಬ್ಬರ ಮೋಸವನ್ನು ಅರಿತ ಶಿವ, ಬ್ರಹ್ಮನನ್ನು ಯಾರೂ ಪೂಜಿಸಕೂಡದು ಎಂದು ಶಾಪ ನೀಡಿ ಲಿಂಗರೂಪ ತಾಳುತ್ತಾನೆ. ಅಂದು ಮಾಘ ಮಾಸದ ಬಹುಳ ತ್ರಯೋದಶಿಯಾಗಿರುತ್ತದೆ. ಹೀಗಾಗಿ ಶಿವ ಲಿಂಗರೂಪ ತಾಳಿದ ಮಾಘ ಮಾಸದ ಬಹುಳ ತ್ರಯೋದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ.

ಶಿವನಿಗೆ ಅತೀ ಶ್ರೇಷ್ಠವಾಗಿರುವ ಬಿಲ್ವ ಪತ್ರೆಯನ್ನು ಅರ್ಪಿಸಿ, ತಿಲಗಿ ಪುಷ್ಪ, ತುಳಸಿಯಿಂದ ಶಿವಲಿಂಗವನ್ನು ಅಲಂಕಾರ ಮಾಡಿ ಶಿವನ್ನು ಭಜಿಸಿದರೆ, ಪಾಪಗಳು ಪರಿಹಾರವಾಗುತ್ತವೆ. ಮೋಡಗಳೇ ಇಲ್ಲದ ಶುಭ್ರ ಆಕಾಶದಲ್ಲಿ ಬಂದಿರುವ ಚಂದ್ರನ ಬೆಳಕಿನಲ್ಲಿ ಶಿವನಿಗೆ ಅಭಿಷೇಕ ಮಾಡಿ ಆರಾಧಿಸಿದರೆ ಅತ್ಯಂತ್ರ ಶ್ರೇಷ್ಠ ಎಂಬ ನಂಬಿಕೆಗಳಿವೆ. ಶಿವರಾತ್ರಿಯ ದಿನವಿಡೀ ಉಪವಾಸ ಮಾಡಿ, ಜಾಗರಣೆ ಮಾಡಿ ಶಿವನನ್ನು ಆರಾಧಿಸಿದರೆ ಸಕಲ ಪಾಪಗಳೂ ಕಳೆಯುತ್ತವೆ ಎಂದು ನಂಬಲಾಗಿದೆ.

ಎಲ್ಲಾ ಜೀವರಾಶಿಗಳನ್ನು ಪೊರೆಯುವ ಶಿವ ಎಲ್ಲಾ ಆಡಂಬರಗಳಿಂದ ಮುಕ್ತ. ಆತ ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ. ಭಸ್ಮವನ್ನು ಬಳಿದುಕೊಂಡು, ಹುಲಿಯ ಚರ್ಮವನ್ನು ಉಟ್ಟು, ಸ್ಮಶಾನದಲ್ಲಿರುವ ಸರಳ ಮತ್ತು ಅಮೋಘ ಶಕ್ತಿ. ಶಿವನು ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಕಲ್ಮಶ ಮನಸ್ಸುಗಳ ಪ್ರತೀಕ. ಛಲಬಿಡದ ಸಾಧನೆಯ ದ್ಯೋತಕ. ಧ್ಯಾನಪ್ರಿಯ ಶಿವ ಭಕ್ತರಿಂದ ಬಯಸುವುದು ನಿಶ್ಕಲ್ಮಶ ಮತ್ತು ಪ್ರಾಮಾಣಿಕ ಭಕ್ತಿ ಮಾತ್ರ. ತೋರಿಕೆಯ ಮತ್ತು ಆಡಂಬರದ ಪೂಜೆಯನ್ನು ಬಯಸದ ಮಹಾದೇವನನ್ನು ಇಂದ್ರಿಯ ನಿಗ್ರಹ, ಧ್ಯಾನ, ಸಂಯಮ ಮತ್ತು ವಿಶ್ವಾಸ ಭರಿತರಾಗಿ ಶಿವರಾತ್ರಿ ಯಂದು ಧ್ಯಾನಿಸಿದರೆ ಆತ ಪ್ರಸನ್ನಗೊಳ್ಳುತ್ತಾನೆ.

ಎಲ್ಲಾ ಆಡಂಬರಗಳಿಂದ ಮುಕ್ತರಾಗಿ, ಸರಳ ಮನಸ್ಸಿನಿಂದ ಪರಶಿವನನ್ನು ನೆನದು, ಭಜಿಸಿ ಶಿವರಾತ್ರಿಯನ್ನು ಆಚರಿಸೋಣ… ಸರಳತೆ, ಪ್ರಾಮಾಣಿಕತೆ, ಸತ್ಯ ಮತ್ತು ಶಕ್ತಿಯ ದೇವತೆ ಈಶ್ವರ ಲೋಕದಲ್ಲಿರುವ ಸಕಲ ಸಂಕಷ್ಟಗಳಿಗೆ ಪರಿಹಾರ ನೀಡಲಿ ಎಂಬುದು ಎಲ್ಲರ ಕೋರಿಕೆ.. ಎಲ್ಲರಿಗೂ ಮಹಾ ಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು.

ಮಹಾ ಶಿವರಾತ್ರಿ, ರುದ್ರನ ಮಂಗಳಕರ ರಾತ್ರಿ ಸಂಪಾದಿಸಿ ಮಾಘ ಮಾಸ ಕೃಷ್ಣ ಪಕ್ಷದ ತ್ರಯೋದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ ಮಂಗಳಕರ ರಾತ್ರಿ. ಹಗಲು ಉಪವಾಸವಿದ್ದು, ರಾತ್ರಿ ವೇಳೆ ಜಾಗರಣೆ ಮಾಡಿ, ಶಿವಧ್ಯಾನ ಮಾಡಿ ಶಿವನ ಕೃಪೆಗೆ ಪಾತ್ರವಾಗುವ ಶುಭ ದಿನ. ಈ ದಿನ ಶಿವನನ್ನು ಭಕ್ತಿಯಿಂದ ಪೂಜಿಸಿದರೆ, ತಾವು ಮಾಡಿದ ಪಾಪಗಳೆಲ್ಲವೂ ಪರಿಹಾರವಾಗಿ, ಮೋಕ್ಷ ಪ್ರಾಪ್ತವಾಗುತ್ತದೆ ಎಂಬುದು ಭಕ್ತರ ಬಲವಾದ ನಂಬಿಕೆ. ಮದುವೆಯಾಗದ ಹೆಣ್ಣು ಮಕ್ಕಳು ಶಿವಗುಣರೂಪಿಯಾದ ಅನುರೂಪ ಪತಿಗಾಗಿ ಪ್ರಾರ್ಥಿಸಿದರೆ, ಮುತ್ತೈದೆಯರು ಪತಿಯ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸುವುದು ಸಂಪ್ರದಾಯ.

ಶಿವರಾತ್ರಿಯಂದು ಶಿವನನ್ನು ಪೂಜಿಸಿದರೆ, ಸುಖ, ಶಾಂತಿ, ಸಮೃದ್ಧಿ ದೊರೆಯುವುದೆಂಬ ನಂಬಿಕೆ ಆಸ್ತಿಕರದು.ಶಿವರಾತ್ರಿಯ ಮಹಿಮೆ: ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ.

ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವ-ಪಾರ್ವತಿಯರ ವಿವಾಹ ಮಹೋತ್ಸವದ ದಿನವಿದು ಎಂಬುದು ವಿಶೇಷ. ಹಿಮವಂತನ ಮಗಳು ಪಾರ್ವತಿ ಈ ದಿನದಂದು ರಾತ್ರಿಯಿಡೀ ಶಿವನಾಮ ಪಠಿಸುತ್ತಾ, ತಪಸ್ಸು ಮಾಡಿ, ಶಿವನನ್ನು ಮೆಚ್ಚಿಸಿ, ವಿವಾಹವಾದಳೆಂಬುದು ಪ್ರತೀತಿ.ಶಿವ ರುದ್ರತಾಂಡವನಾಡಿದ ರಾತ್ರಿಯೂ ಇಂದೇ ಎನ್ನಲಾಗುತ್ತದೆ.

ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ. ಹಾಗಾಗಿ ಭಕ್ತರು ಇಡೀ ರಾತ್ರಿ ಎಚ್ಚರವಿದ್ದು, ನೀಲಕಂಠನನ್ನು ಸ್ತುತಿಸುತ್ತಾರೆ. ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡಿದ್ದ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ, ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ. ಲಿಂಗಪುರಾಣದ ಪ್ರಕಾರ ಲಿಂಗ ರೂಪಿಯಾಗಿ ಭಕ್ತರಿಗೆ ಅನುಗ್ರಹ ನೀಡಿದ ದಿನವಿದು. ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ.

ಬೇಡನ ಶಿವಭಕ್ತಿ

ಶಿವರಾತ್ರಿ ಆಚರಣೆಯ ಕುರಿತಾಗಿ ಪ್ರಚಲಿತದಲ್ಲಿರುವ ಕಥೆಯಿದು. ಹಿಂದೆ ಬೇಡನೊಬ್ಬ ಕಾಡಿನಲ್ಲಿ ಬೇಟೆಗಾಗಿ ತೆರಳಿದ್ದ. ದಿನವಿಡಿ ಅಲೆದರೂ ಆತನಿಗೆ ಯಾವುದೇ ಬೇಟೆ ಸಿಗಲಿಲ್ಲ. ಬೇಟೆ ಅರಸಿ ಹೊರಟ ಬೇಡ ದಾರಿ ತಪ್ಪಿ ಅರಣ್ಯದಲ್ಲೇ ಅಲೆಯತೊಡಗಿದ. ಅದಾಗಲೇ ಸಂಜೆಯಾಗಿತ್ತು. ಕ್ರೂರ ಪ್ರಾಣಿಗಳು ಆತನನ್ನು ಸುತ್ತುವರಿಯತೊಡಗಿದವು. ಭಯಗ್ರಸ್ತನಾದ ಬೇಡ ಮರವೇರಿದ. ಮನದಲ್ಲೇ ಶಿವನನ್ನು ಧ್ಯಾನಿಸುತ್ತಾ ಮರದ ಎಲೆಗಳನ್ನು ಕಿತ್ತು ಕೆಳಗಡೆ ಹಾಕತೊಡಗಿದ. ಆ ಎಲೆಗಳು ಅವನಿಗರಿವಿಲ್ಲದಂತೆಯೇ ಕೆಳಗಡೆಯಿದ್ದ ಶಿವಲಿಂಗದ ಮೇಲೆ ಬೀಳತೊಡಗಿದವು. ಕಾಕತಾಳೀಯವೆಂದರೆ ಆತ ಏರಿದ್ದ ಮರ ಬಿಲ್ವಮರವಾಗಿತ್ತು. ಶಿವರಾತ್ರಿಯಂದು ಪೂರ್ತಿ ಜಾಗರಣೆಯಿದ್ದು, ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸಿದ ಬೇಡನಿಗೆ ಶಿವ ಅಭಯ ನೀಡಿದ. ಶಿವನೇ ಆತನನ್ನು ರಕ್ಷಿಸಿದ ಎಂಬ ಸುದ್ದಿ ಹರಡಿ ಭಕ್ತರು ಶಿವರಾತ್ರಿಯಂದು ಶಿವನನ್ನು ಪೂಜಿಸಲು ಆರಂಭಿಸಿದರು. ಪುಣ್ಯದ ಲವಾಗಿ ಬೇಡ ಮುಂದಿನ ಜನ್ಮದಲ್ಲಿ ರಾಜಾ ಚಿತ್ರಭಾನುವಾಗಿ ಜನಿಸಿದ ಎಂಬುದು ಕಥೆ. ಮಹಾಭಾರತದಲ್ಲಿ ಬರುವ ಈ ಕಥೆಯನ್ನು ಮರಣಶಯ್ಯೆಯಲ್ಲಿ ಮಲಗಿದ್ದ ಭೀಷ್ಮ ಹೇಳಿದನೆಂಬುದು ಪ್ರತೀತಿ.

ಶಿವರಾತ್ರಿ ಆಚರಣೆ ಹಿನ್ನೆಲೆ

ಪ್ರತಿ ಸಂವತ್ಸರದಲ್ಲಿ ಶಿಶಿರ ಋತುವಿನ ಮಾಘ ಮಾಸದ ಕೃಷ್ಣಪಕ್ಷ ತ್ರಯೋದಶಿಯಂದು ರಾತ್ರಿ ಸಮಯದಲ್ಲಿ ಶಿವ ಪಾರ್ವತಿ ಜೊತೆಯಲ್ಲಿ ಭೂಮಿಗೆ ಬರುತ್ತಾನೆ. ಭೂಮಿಯಲ್ಲಿ ಸಂಚರಿಸುತ್ತ ಎಲ್ಲಾ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣ ಗೊಳ್ಳುತ್ತಾನೆ. ಆ ಸಮಯದಲ್ಲಿ ಅಂದರೆ ಶಿವರಾತ್ರಿ ರಾತ್ರಿ ವೇಳೆಯಲ್ಲಿ ತನ್ನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಯೂ ಇದೆ.

ಸ್ಕಂದ ಪುರಾಣ ದಲ್ಲಿ ಶಿವರಾತ್ರಿ ಹಬ್ಬದ ಬಗ್ಗೆ ಉಲ್ಲೇಖವಿದೆ. ಶಿವರಾತ್ರಿಯು ಸಮಯ ಪೂಜೆಗೆ ಬಹು ಪ್ರಾಶಸ್ತ್ಯವಾದ ಸಮಯ. ಆ ದಿನ ರಾತ್ರಿಯಲ್ಲಿ ಮೋಡಗಳಿಲ್ಲದ ಶುಭ್ರ ಆಕಾಶ, ಮಂಗಳಕರನಾದ ಶುಭ್ರ ಚಂದ್ರ ಸ್ಪೂರ್ತಿ ಹುಟ್ಟಿಸುವ ಸಂವೇದನಾಶೀಲ ವಾತಾವರಣವನ್ನು ಕಾಣಬಹುದು. ಈ ಪರ್ವಕಾಲವು ಪೂಜೆಗೆ ಪ್ರಶಸ್ತವಾದ ಕಾಲವಾಗಿದ್ದು ಶಿವನ ಆರಾಧನೆ ಮಾಡಿದರೆ ಪಾಪ ಕರ್ಮಗಳನ್ನು ಕಳೆಯುತ್ತಾನೆ ಎಂಬ ಪ್ರತೀತಿ ಇದೆ.

ತ್ರಯೋದಶಿಯು ಶಕ್ತಿರೂಪವಾದರೆ, ಚತುರ್ದಶಿಯು ಶಿವರೂಪ. ತ್ರಯೋದಶಿಯು ಚತುರ್ದಶಿಯಲ್ಲಿ ಅಂತರ್ಗತ ವಾಗಿದ್ದರೆ ಅದು ಶಿವಶಕ್ತಿಯೋಗ ವಾಗುತ್ತದೆ. ಅದೇ ಶಿವರಾತ್ರಿಯ ಸಮಯವೆಂದು ಉಕ್ತಿಯೊಂದರಲ್ಲಿ ಉಲ್ಲೇಖವಿದೆ. ಈ ಶುಭ ಪುಣ್ಯದಿನದಂದು ಬ್ರಹ್ಮ ವಿಷ್ಣು ಆದಿಯಾಗಿ ಶಿವನನ್ನು ಪೂಜಿಸಿದ್ದು ಶಿವನೆ ತನಗೆ ಶಿವರಾತ್ರಿ ಪ್ರಿಯವಾದ ದಿನವೆಂದು ಹೇಳಿರುವನೆಂದು ಪ್ರತೀತಿ ಇದೆ.

ಶಿವ ಪುರಾಣದಲ್ಲಿ ಬರುವ ಬೇಡರ ಕಣ್ಣಪ್ಪನ ಕಥೆ- ಸ್ಕಂದ ಪುರಾಣದ ಬೇಡ ಚಂದನನ ಕಥೆ. ಗರುಡ ಮತ್ತು ಅಗ್ನಿ ಪುರಾಣಗಳ ಬೇಡ ಸುಂದರ ಸೇನನ ಕಥೆ… ಈ ಎಲ್ಲ ಕಥೆಗಳಲ್ಲೂ ಒಂದು ವಿಶೇಷವಾದ ಸಾಮ್ಯತೆಯನ್ನು ಕಾಣಬಹುದು. ಮಹಾ ಶಿವರಾತ್ರಿಯಂದು ಉಪವಾಸ ಮಾಡಿ ಶಿವನಿಗೆ ಅಭಿಷೇಕ ಮಾಡಿ ಬಿಲ್ವ ಪತ್ರೆಗಳನ್ನು ಅರ್ಪಿಸಿದ್ದರಿಂದ ಅವರೆಲ್ಲರಿಗೂ ಸದ್ಗತಿ ಪ್ರಾಪ್ತವಾಯಿತು. ಇದು ಶಿವರಾತ್ರಿ ಪೂಜೆಯ ಫಲದ ಮಹಿಮೆಯನ್ನು ಎತ್ತಿ ತೋರಿಸುತ್ತದೆ.

ದೇವತೆಗಳು ಮತ್ತು ಅಸುರರು ಅಮೃತಕ್ಕಾಗಿ ಸಮುದ್ರ ಮಂಥನ ಮಾಡ್ತಿರಬೇಕಾದರೆ ಮೊದಲು ಮಡಿಕೆ ತುಂಬ ಹಾಲಾಹಲ ಉತ್ಪತ್ತಿಯಾಯಿತು. ಆದರೆ ದೇವತೆಗಳು ಅಸುರರು ಯಾರೂ ಆ ಹಾಲಾಹಲವನ್ನು ಕುಡಿಯೋಕೆ ಮುಂದಾಗಲಿಲ್ಲ. ಆ ಹಾಲಾಹಲ ಇಡೀ ನಭೋಮಂಡಲವನ್ನೇ ನಾಶಮಾಡಬಲ್ಲ ಸಾಮಥ್ರ್ಯವನ್ನು ಹೊಂದಿತ್ತು. ಹೀಗಾಗಿ ಲೋಕ ಕಲ್ಯಾಣಕ್ಕಾಗಿ ಪರಶಿವನೇ ಆ ಹಾಲಾಹಲವನ್ನು ಕುಡಿದುಬಿಟ್ಟ. ಅದೇ ಸಮಯಕ್ಕೆ ಪತ್ನಿ ಪಾರ್ವತಿ ದೇವಿ ಬಂದು ಆ ವಿಷ ಶಿವನ ಹೊಟ್ಟೆ ಸೇರದಂತೆ ಗಂಟಲಲ್ಲೇ ತಡೆ ಹಿಡಿದಳು. ವ್ಯಕ್ತಿಗಳು ನಿದ್ರಿಸುತ್ತಿದ್ದರೆ ವಿಷವು ಬೇಗನೆ ದೇಹದ ತುಂಬ ಹರಡುತ್ತದೆ. ಹೀಗಾಗಿ ದೇವತೆಗಳೆಲ್ಲರೂ ಶಿವನ ಭಜನೆ ಮಾಡಿ ಶಿವನನ್ನು ಎಚ್ಚರವಿರಿಸಿದರು. ಹೀಗಾಗಿ ಈ ಪವಿತ್ರ ದಿನವನ್ನು ಶಿವರಾತ್ರಿ ಎಂದು ಆಚರಿಸಲಾಗುತ್ತದೆ.

ವೈಜ್ಞಾನಿಕವಾಗಿ ಶಿವರಾತ್ರಿಯ ಆಚರಣೆ

ಸೂರ್ಯ ಮತ್ತು ಚಂದ್ರರ ಚಲನೆಯಿಂದಾಗುವ ಎಲ್ಲಾ ಕಾಲ ವ್ಯತ್ಯಾಸಕ್ಕೆ ಈ ನಮ್ಮ ದೇಹ ಹೊಂದಿಕೊಳ್ಳ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಈ ಹಬ್ಬದ ಆಚರಣೆ ಬಹು ಮುಖ್ಯ. ಈ ಸಮಯದಲ್ಲಿ ಛಳಿಗಾಲವು ಮುಗಿದು ಬೇಸಿಗೆಕಾಲವು ಪ್ರಾರಂಭಗೊಳ್ಳುವುದು.

ಅಂದರೆ ಈ ದಿನದಂದು ಚಳಿಗಾಲ ಉತ್ತುಂಗದಲ್ಲಿದ್ದು ಅಂದು ಕೃಷ್ಣ ಪಕ್ಷದ ಕೊನೆಯ ದಿನವೂ ಆಗಿರುತ್ತದೆ. ಈ ದಿನದಲ್ಲಿ ಸೂರ್ಯನ ಶಾಖ ಕಡಿಮೆಯಾಗಿರುತ್ತದೆ ಮತ್ತು ಚಂದ್ರನ ಪ್ರಕಾಶವೂ ಕ್ಷೀಣಿಸಿರುತ್ತದೆ. ನಮ್ಮ ಪೂರ್ವಜರು ಇದನ್ನೆಲ್ಲಾ ಅರಿತೇ ಹಬ್ಬ ಹರಿದಿನಗಳನ್ನು ಆಚರಿಸುತ್ತಿದ್ದರು.

ಈ ವ್ಯತ್ಯಯದ ಸಮಯದಲ್ಲಿ ನಮ್ಮ ದೇಹದಲ್ಲಿ ಬಹಳಷ್ಟು ಬದಲಾವಣೆಗಳಾಗುತ್ತವೆ. ಈ ಕಾಲ ವ್ಯತ್ಯಾಸದ ಸಮಯದಲ್ಲಿ ನಮ್ಮಲ್ಲಿ ಉಸಿರಾಟದ ತೊಂದರೆ (ನೆಗಡಿ, ಕೆಮ್ಮು, ಶೀತ ಮತ್ತಿತರೆ) ಬರುವುದು. ಈ ದಿನದಂದು ನಾವು ಮಾಡುವ ಶಿವನ ಪೂಜೆ, ಉಪವಾಸಗಳು ನಮಗೆ ತುಂಬಾ ಉಪಯುಕ್ತ. ಅಂದು ಪರಶಿವನಿಗೆ ನೀರಿನ ಅಭಿಷೇಕ ಮತ್ತು ಬಿಲ್ವ ಪತ್ರೆಯ ಪೂಜೆ. ಬಿಲ್ವ ಪತ್ರೆಯಲ್ಲಿ ಉಸಿರಾಟದ ತೊಂದರೆ ನಿವಾರಿಸುವ ಗುಣವಿದೆ. ಬಿಲ್ವವನ್ನು ಲಿಂಗದ ಮೇಲೆ ಹಾಕುವಾಗ ಅದರ ವಾಸನೆ ನಮ್ಮ ದೇಹದ ಒಳಗೆ ಹೋಗುವುದು. ಬಿಲ್ವವನ್ನು ಮೂಸಿ ಎಸೆಯುವುದು ಸರಿಯಾದ ವಿಧಾನ. ಶಿವನ ಲಿಂಗವು ಕಲ್ಲಿನದಾಗಿದ್ದು ಅದರ ಮೇಲೆ ನೀರನ್ನು ಸುರಿಯುವುದರಿಂದ ಬಹಳಷ್ಟು ಶಕ್ತಿ ಹೊರಹೊಮ್ಮುತ್ತದೆ. ಅದೊಂದು ವಿಶಿಷ್ಟ ಕಲ್ಲಿನಿಂದ ಮಾಡಿದ ಲಿಂಗವಾಗಿರುತ್ತದೆ.

ಪೂಜಿಸುವ ದೇಗುಲವನ್ನು ವಾಸ್ತುವಿನ ಪ್ರಕಾರ ಕಟ್ಟಿರುತ್ತಾರೆ. ಈ ಕ್ಷೇತ್ರದಲ್ಲಿ ಹೆಚ್ಚಿನ ಗುರುತ್ವಾಕರ್ಷಣವಿದ್ದು ಅದನ್ನು ಶಿವ ಶಕ್ತಿಯೆಂದೂ ಕರೆಯುವರು. ಇಲ್ಲಿ ಮಂತ್ರಗಳನ್ನು ಪಠಿಸುತ್ತಾ ವಿಶಿಷ್ಟ ಕಲ್ಲಿನಿಂದ ಕೆತ್ತಿರುವ ಲಿಂಗಕ್ಕೆ ನೀರಿನ ಅಭಿಷೇಕ ಮಾಡುವುದರಿಂದ ಸುತ್ತಮುತ್ತಲಿಗೆಲ್ಲಾ ಹೆಚ್ಚಿನ ಶಕ್ತಿ ಬರುವುದೆಂಬ ನಂಬಿಕೆ ಇದೆ.

ವೇದೋಕ್ತ ಪೂಜೆ ಮತ್ತು ಆಚರಣೆ

ಬಿಲ್ವದ ಎಲೆ ಹೃದಯವನ್ನು ಹೋಲುತ್ತದೆ ಮತ್ತು ಲಿಂಗ ಪರಮಾತ್ಮನ ಪ್ರತೀಕ. ಆದ್ದರಿಂದ ಇವೆರಡರ ಜೊತೆಗೂಡಿಕೆ ಆತ್ಮ ಪರಮಾತ್ಮಗಳ ಮಿಲನ. ರಾತ್ರಿಯು ಅಜ್ಞಾನದ ಸಂಕೇತ ಮತ್ತು ಆ ವೇಳೆಯಲ್ಲಿ ನಿದ್ರೆ ಮಾಡದೇ ಎಚ್ಚರವಾಗಿರುವುದು ತಿಳುವಳಿಕೆಯ ಕಡೆಗೆ ಹೋಗುತ್ತಿರುವ ಸಂಕೇತ. ಹೀಗೆ ಶಿವರಾತ್ರಿಯ ರಾತ್ರಿ ಜಾಗರಣೆ ಮಾಡುವುದು ಮೋಕ್ಷದ ಕಡೆಗೆ ಹೊಗುವುದು ಎಂದು ತತ್ವಗಳು ತಿಳಿಸುತ್ತವೆ.

ಉಪವಾಸ ಮಾಡುವುದು ಎಂದರೆ, ದೇವರಿಗೆ ಹತ್ತಿರವಾಗಿರುವುದು/ದೇವರ ಬಗ್ಗೆ ಚಿಂತಿಸುತ್ತಿರುವುದು ಎಂದು ಅರ್ಥ. ಹೀಗೆ ಆತನ ಧ್ಯಾನದಲ್ಲಿ ಇರುವಾಗ ಊಟ/ತಿಂಡಿಯ ಕಡೆ ಗಮನ ಹೋಗುವುದಿಲ್ಲ.

ಜಾಗರಣೆ ಎಂದರೆ, ಜಾಗೃತರಾಗಿರೋದು ಎಂದು. ರಾತ್ರಿ ಎನ್ನುವುದು ತಮೋ ಗುಣದ ಪ್ರತೀಕ. ಆಲಸ್ಯ, ನಿದ್ರೆ, ಅಹಂಕಾರ, ಅಜ್ಞಾನಗಳ ದ್ಯೋತಕ ನಿಶೆ. ಆ ಸಮಯದಲ್ಲಿ ಜಾಗೃತರಾಗಿರಬೇಕು ಎಂದರೆ, ಅವುಗಳಿಂದ ಜಾಗೃತರಾಗಿರಬೇಕು ಎಂಬರ್ಥ. ಹಾಗೆ ಜಾಗೃತರಾಗಿರುವುದಕ್ಕೆ ನಮಗೆ ಸಹಾಯವನ್ನು ಮಾಡುವವನು ದೇವರು. ಆ ದೇವರನ್ನು ಸ್ಮರಿಸುತ್ತ ಈ ತಮೋ ಗುಣಗಳಿಂದ ಜಾಗೃತರಾಗಿರಬೇಕು ಎನ್ನುವುದರ ಪ್ರತೀಕ ಶಿವರಾತ್ರಿಯ ಜಾಗರಣೆ.

ಆ ದಿನ ಬೆಳಗ್ಗೆ ಬೇಗ ಎದ್ದು ಅಭ್ಯಂಜನ ಮಾಡಿ ಶಿವನಿಗೆ ಅಭಿಷೇಕ ಮಾಡುವುದು ರೂಢಿ. ಇಲ್ಲಿ ದಿನವನ್ನು ಮೂರು ಭಾಗಗಳನ್ನಾಗಿ ಮಾಡಿ ರುದ್ರಾಭಿಷೇಕಯುಕ್ತ ಪೂಜೆಯನ್ನು ಮಾಡುವುದು ವಾಡಿಕೆ. ರುದ್ರ ನಮಕ ಚಮಕಗಳನ್ನು ಉಚ್ಚರಿಸುವುದರಿಂದ ಉಸಿರಾಟಕ್ಕೂ ಹೆಚ್ಚಿನ ಶಕ್ತಿ ಬರುವುದು ಮತ್ತು ಬಾಯಿಯಿಂದ ಹೊರ ಹೊಮ್ಮುವ ತರಂಗಗಳಿಂದ ಸುತ್ತ ಮುತ್ತಲಿನ ಪರಿಸರ ಶಕ್ತಿಯುತವಾಗುವುದು.

ಮೊದಲಿಗೆ ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕವನ್ನೂ ಮಾಡುವರು. ಇದಕ್ಕೆಂದೇ ಮಹಾನ್ಯಾಸವೆಂಬ ಪ್ರಕಾರವಿದೆ. ನಂತರ ನೀರಿನ ಅಭಿಷೇಕವನ್ನು ನಿರಂತರವಾಗಿ ಮಾಡುವರು. ಅಭಿಷೇಕಕ್ಕಾಗಿಯೇ ಪ್ರತ್ಯೇಕವಾದ ಪಾತ್ರೆ ಇರುವುದು. ಅದರ ತಳಭಾಗದಲ್ಲಿ ರಂದ್ರವಿದ್ದು ಅದನ್ನು ಲಿಂಗದ ಮೇಲೆ ತೂಗು ಬಿಟ್ಟಿರುವರು. ಅದರೊಳಗೆ ನೀರು ತುಂಬಿಸಿದರೆ, ಸಣ್ಣದಾಗಿ ನೀರು ಲಿಂಗದ ಮೇಲೆ ಬೀಳುವುದು. ಕೃಷ್ಣ ಯಜುರ್ವೇದದ ಪ್ರಕಾರವಾದ ರುದ್ರ ನಮಕ ಮತ್ತು ಚಮಕಗಳನ್ನು ಅಭಿಷೇಕದ ಸಂದರ್ಭದಲ್ಲಿ ಪಠಿಸುತ್ತಾರೆ. ಹನ್ನೊಂದು ಬಾರಿ ನಮಕ ಚಮಕಗಳನ್ನು ಹನ್ನೊಂದು ಜನ ಋತ್ವಿಕರು ಪಠಣ ಮಾಡುವುದಕ್ಕೆ ಏಕಾದಶವಾರ ರುದ್ರಾಭಿಷೇಕ ಎಂದು ಕರೆಯುವರು.

ಮೊದಲಿಗೆ ಚಮಕದ ಮೂರನೆಯ ಭಾಗವನ್ನು ಉಚ್ಚರಿಸಿ, ನಂತರ ಒಂದು ನಮಕದ ಭಾಗವನ್ನೂ ನಂತರ ಹನ್ನೊಂದು ಚಮಕ ಭಾಗಗಳನ್ನೂ ಪಠಿಸುವರು. ತದನಂತರ ಎರಡನೆಯ ನಮಕದ ಭಾಗವನ್ನೂ ಮತ್ತು ಹನ್ನೊಂದು ಚಮಕ ಭಾಗಗಳನ್ನೂ ಪಠಿಸುವರು. ಹೀಗೆ ನಮಕಗಳ ಹನ್ನೊಂದೂ ಭಾಗವನ್ನು ಪಠಿಸಿ ಅಭಿಷೇಕ ಮಾಡುವರು. ಇದಕ್ಕೆ ಒಂದು ರುದ್ರವೆಂದು ಕರೆಯುವರು. ಬೆಳಗ್ಗೆ, ಸಂಜೆ ಮತ್ತು ರಾತ್ರೆ ಹೀಗೆ 24 ಘಂಟೆಗಳು ಭಗವನ್ನಾಮಸ್ಮರಣೆ ಮಾಡುತ್ತಾ ಜಾಗರಣೆ ಮಾಡುವುದು ಪರಿಪಾಠ. ಅಂದು ಊಟ ಮಾಡದೆ ಅಲ್ಪಾಹಾರ ಸೇವನೆ ಮಾಡುವರು.

ಜಾಗರಣೆ, ಹಬ್ಬದ ವಿಶೇಷ ಆಚರಣೆ

ಕಾಶಿ ವಿಶ್ವನಾಥ, ಗೋಕರ್ಣದ ಮಹಾಬಲೇಶ್ವರ, ರಾಮೇಶ್ವರದ ರಾಮೇಶ್ವರ ಸೇರಿದಂತೆ ರಾಜ್ಯ, ದೇಶ, ವಿದೇಶಗಳ ಶಿವ ದೇವಾಲಯಗಳಲ್ಲಿ ಅಂದು ವಿಶೇಷ ಪೂಜೆ ನಡೆಯುತ್ತದೆ. ಬಿಲ್ವಾರ್ಚನೆ, ರುದ್ರಾಭಿಷೇಕ, ಶಿವನಾಮ ಧ್ಯಾನಗಳ ಮೂಲಕ ಶಿವನನ್ನು ಆರಾಧಿಸಲಾಗುತ್ತದೆ. ಇಡೀ ರಾತ್ರಿ ಶಿವದೇವಾಲಯಗಳಲ್ಲಿ ರುದ್ರಪಠಣದ ಜೊತೆ ಜಾಗರಣೆ ನಡೆಯುತ್ತದೆ.

ಶಿವರಾತ್ರಿಯಂದು ಬೆಳಗ್ಗೆ ಬೇಗನೆ ಏಳುವ ಭಕ್ತರು, ಸ್ನಾನ ಮಾಡಿ, ಶುಚಿರ್ಭೂತರಾಗಿ ಶಿವ ದೇವಾಲಯಕ್ಕೆ ತೆರಳುತ್ತಾರೆ. ಕೆಲವರು ಕೈಲಾಸಯಂತ್ರ ರಚಿಸಿ, ಮನೆಯಲ್ಲಿಯೇ ಶಿವನಿಗೆ ವಿಶೇಷ ಪೂಜೆ ನಡೆಸುತ್ತಾರೆ.

ಗಂಗಾ, ಬ್ರಹ್ಮಪುತ್ರ, ಕೃಷ್ಣ, ಕಾವೇರಿ, ತ್ರಿವೇಣಿ ಸಂಗಮ ಸೇರಿದಂತೆ ಪುಣ್ಯನದಿಗಳಲ್ಲಿ ಭಕ್ತರು ಸ್ನಾನ ಮಾಡುತ್ತಾರೆ. ಕೆಲವರು ಹಾಲು, ಹಣ್ಣು ಸೇವಿಸಿ ಲಘು ಉಪಹಾರ ಸೇವಿಸಿದರೆ, ಕೆಲವು ಭಕ್ತರು ದಿನವಿಡಿ ಏನನ್ನೂ ತಿನ್ನದೆ, ನೀರನ್ನೂ ಕುಡಿಯದೆ ಉಪವಾಸ ಇರುತ್ತಾರೆ. ಭಸ್ಮ ಲೇಪಿಸಿಕೊಂಡು, ಬಿಲ್ವಾರ್ಚನೆ ಮೂಲಕ ರುದ್ರ ಪಠಣ ಹಬ್ಬದ ಆಚರಣೆಯ ವಿಶೇಷ.

ಅಭಿಷೇಕಕಪ್ರಿಯ ಎಂದೇ ಖ್ಯಾತನಾದ ಶಿವನಿಗೆ ದಿನವಿಡೀ ಹಾಲು, ಜೇನುತುಪ್ಪ ಹಾಗೂ ನೀರಿನ ಅಭಿಷೇಕ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಶಿವಲಿಂಗಕ್ಕೆ ಅಭಿಷೇಕ ಮಾಡಲಾಗುತ್ತದೆ. ಬಿಲ್ವಪತ್ರೆ, ತುಳಸಿ, ಶ್ರೀಗಂಧ, ಹಾಲು, ಜೇನುತುಪ್ಪಗಳಿಂದ ಅಭಿಷೇಕ ನಡೆಯುತ್ತದೆ. ಶಿವ ಪಂಚಾಕ್ಷರಿ ಮಂತ್ರ “ಓಂ ನಮ: ಶಿವಾಯ”, ಹರ ಹರ ಮಹಾದೇವ, ಶಂಭೋ ಶಂಕರ. ಶಿವ ದೇವಾಲಯಗಳಲ್ಲಿ ಮಾರ್ದನಿಸುತ್ತದೆ.

ನಾಲ್ಕು ಆಯಾಮಗಳ ರುದ್ರಪಠಣ, ಶಿವರಾತ್ರಿ ಪೂಜೆಯ ವಿಶೇಷ. ಶಿವಪುರಾಣದ ಪ್ರಕಾರ ರುದ್ರ ಹಾಗೂ ಚಮೆಗಳ ಪಠಣ ಶಿವನಿಗೆ ಅಚ್ಚುಮೆಚ್ಚು. ದೇವಾಲಯಗಳಲ್ಲಿ ಸಂಜೆ 6 ಗಂಟೆಯಿಂದ ಮೊದಲ್ಗೊಂಡು ಮುಂಜಾನೆ 6 ಗಂಟೆಯವರೆಗೆ ರುದ್ರಪಠಣದ ಮೂಲಕ ಶಿವ ಸ್ತುತಿ, ಜಾಗರಣೆ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಮಂಗಳಾರತಿ ಮಾಡಲಾಗುತ್ತದೆ. ಬೆಳಗ್ಗೆ 6 ಗಂಟೆಗೆ ಮಹಾಮಂಗಳಾರತಿ ಆಚರಣೆ ಮೂಲಕ ಜಾಗರಣೆ ಮುಕ್ತಾಯಗೊಳ್ಳುತ್ತದೆ. ಮೊದಲನೆಯ ಆಯಾಮದಲ್ಲಿ ಹಾಲು, ಎರಡನೆಯ ಆಯಾಮದಲ್ಲಿ ಮೊಸರು, ಮೂರನೆಯ ಆಯಾಮದಲ್ಲಿ ತುಪ್ಪ ಹಾಗೂ ನಾಲ್ಕನೆಯ ಆಯಾಮದಲ್ಲಿ ಜೇನುತುಪ್ಪಗಳಿಂದ ಶಿವನಿಗೆ ಅಭಿಷೇಕ ಮಾಡುವ ಪದ್ಧತಿಯೂ ಕೆಲವೆಡೆ ಇದೆ.

ಮಹಾ ಶಿವರಾತ್ರಿ ಹಬ್ಬವು ಸರ್ವರಿಗೂ ಒಳಿತನ್ನು ಮಾಡಲಿ.

ಶಿವಾರ್ಪಣ ಮಸ್ತು.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಶ್ರೀ ಆದಿಯೋಗಿ ಸನ್ನಿಧಿಯಲ್ಲಿ ಮಹಾ ಶಿವರಾತ್ರಿ

ಶ್ರೀ ಆದಿಯೋಗಿ ಸನ್ನಿಧಿಯಲ್ಲಿ ಮಹಾ ಶಿವರಾತ್ರಿ

Leave a Reply Cancel reply

Your email address will not be published. Required fields are marked *

Recommended

ಅವಸಾನದತ್ತ ದೇವಿಕುಂಟೆ ಗಿರಿಯ ಕೋಟೆ, ಕಲ್ಯಾಣಿ, ಬಾವಿ & ಸ್ಮಾರಕಗಳು; ತಲೆಕೆಡಿಸಿಕೊಳ್ಳದ ಜಿಲ್ಲಾಡಳಿತ-ಪುರಾತತ್ವ ಇಲಾಖೆ, ಭಾಗ್ಯನಗರ ಆಗುವ ಮುನ್ನವೇ ಕಳಾಹೀನವಾದ ಬಾಗೇಪಲ್ಲಿ!!

ಅವಸಾನದತ್ತ ದೇವಿಕುಂಟೆ ಗಿರಿಯ ಕೋಟೆ, ಕಲ್ಯಾಣಿ, ಬಾವಿ & ಸ್ಮಾರಕಗಳು; ತಲೆಕೆಡಿಸಿಕೊಳ್ಳದ ಜಿಲ್ಲಾಡಳಿತ-ಪುರಾತತ್ವ ಇಲಾಖೆ, ಭಾಗ್ಯನಗರ ಆಗುವ ಮುನ್ನವೇ ಕಳಾಹೀನವಾದ ಬಾಗೇಪಲ್ಲಿ!!

4 years ago
ಮಿಟ್ಟೆಮರಿಯ ಗರುಡಾದ್ರಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ; ಬಾರದ ಗರುಡ ಪಕ್ಷಿ

ಮಿಟ್ಟೆಮರಿಯ ಗರುಡಾದ್ರಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ; ಬಾರದ ಗರುಡ ಪಕ್ಷಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ