750 ಲಕ್ಷ ರೂ.ಗಳ ವೆಚ್ಚದ ಯೋಜನೆ
ಬೆಂಗಳೂರು: ನೆರೆಯ ಮಹಾರಾಷ್ಟ್ರದ ಪಂಡರಾಪುರ ಶ್ರೀಕ್ಷೇತ್ರಕ್ಕೆ ರಾಜ್ಯದಿಂದ ಸಾವಿರಾರು ಮಂದಿ ಭಕ್ತಾದಿಗಳು ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಹೆಚ್ಚಿನ ಜನರು ಭೇಟಿ ನೀಡುತ್ತಾರೆ.
ಭಕ್ತಾದಿಗಳ ಅನುಕೂಲಕ್ಕಾಗಿ ಪಂಡರಾಪುರದಲ್ಲಿ ಅತಿಥಿಗೃಹ ನಿರ್ಮಾಣ ಮಾಡಲಾಗುವುದು ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಈ ಕುರಿತು 2022-23ನೇ ಸಾಲಿನ ಆಯವ್ಯದಲ್ಲಿ ಘೋಷಣೆ ಮಾಡಲಾಗಿದ್ದು, ಈ ಕುರಿತ ಪ್ರಸ್ತಾವನೆಗೆ 750 ಲಕ್ಷ ರೂ.ಗಳ ವೆಚ್ಚದಲ್ಲಿ ಸುಸಜ್ಜಿತ ಅತಿಥಿಗೃಹ ನಿರ್ಮಾಣಕ್ಕೆ ಸರ್ಕಾರದ ಮಂಜೂರಾತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸೊಲ್ಲಾಪುರ ಜಿಲ್ಲೆಯ ಪಂಡರಾಪುರ ಶ್ರೀಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಿದ್ದು, ಅವರ ಅನುಕೂಲಕ್ಕಾಗಿ ಪಂಡರಾಪುರದಲ್ಲಿ ರಾಜ್ಯದ ಛತ್ರ ನಿರ್ಮಾಣ ಮಾಡಬೇಕೆನ್ನುವುದು ಅನೇಕ ವರ್ಷಗಳ ಬೇಡಿಕೆಯಾಗಿತ್ತು ಎಂದು ಸಚಿವರು ತಿಳಿಸಿದ್ದಾರೆ.
ಕಾಶಿಯಾತ್ರೆ ಮತ್ತು ಪಂಡರಾಪುರದಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶಶಿಕಲಾ ಜೊಲ್ಲೆ ಕೃತಜ್ಞತೆ ಸಲ್ಲಿಸಿದ್ದಾರೆ.