ಅ.11ರಿಂದ ರಾಜ್ಯಾದ್ಯಂತ ಸಂಘಟನಾ ಪ್ರವಾಸ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಬಿಜೆಪಿ ಅ. 11 ರಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಾದ್ಯಂತ ಸಂಘಟನಾ ಪ್ರವಾಸ ನಡೆಸಲಿದ್ದಾರೆ.
ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೀದರ್, ಯಾದಗಿರಿ, ಕಲಬುರುಗಿ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಹುಬ್ಬಳ್ಳಿ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ದಾವಣಗೆರೆ, ಚಿತ್ರದುರ್ಗಾ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ . ವಿಜಯಪುರ, ಬಾಗಲಕೋಟೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತಿತರ ಜಿಲ್ಲೆಗಳಲ್ಲಿ ಪ್ರವಾಸ ನಡೆಯಲಿದೆ.
ಶುಕ್ರವಾರ ನಡೆಯಲಿರುವ ಪಕ್ಷದ ಕಾರ್ಯಕಾರಿಣಿ ಸಭೆಯ ನಂತರ ರಾಜ್ಯ ಪ್ರವಾಸದ ಅಧಿಕೃತ ವೇಳೆ ಪಟ್ಟಿ ಪ್ರಕಟವಾಗಲಿದೆ. ಈ ಪ್ರವಾಸದ ವೇಳೆ ಬೃಹತ್ ಸಮಾವೇಶಗಳನ್ನು ಹಮ್ಮಿಕೊಂಡು ರಾಜ್ಯದಲ್ಲಿ ಬಿಜೆಪಿ ಅಲೆ ಎಬ್ಬಿಸುವ ಸಂಕಲ್ಪ ತೊಟ್ಟಿದ್ದಾರೆ.
ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹೆಚ್ಚು ಹೆಚ್ಚು ಪ್ರಚಾರಕ್ಕೆ ಬಳಿಸಿಕೊಳ್ಳಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ನ ಭಾರತ್ ಜೋಡೋ ಪಾದಯಾತ್ರೆಗೆ ಸಿಗುತ್ತಿರುವ ಜನಬೆಂಬಲಕ್ಕೆ ಪ್ರತಿಯಾಗಿ ರಾಜ್ಯಾದ್ಯಂತ ಬಿಜೆಪಿ ಹವಾ ಎಬ್ಬಿಸಲು ನಾಯಕರು ನಿರ್ಧರಿಸಿದ್ದಾರೆ.
ಕಲಬುರಗಿಯಲ್ಲಿ ಅಕ್ಟೋಬರ್ 30 ರಂದು ಒಬಿಸಿ ಮೋರ್ಚಾದಿಂದ ಬೃಹತ್ ಸಮಾವೇಶ ಆಯೋಜನೆ ಮಾಡಿದ್ದು, ಒಬಿಸಿ ಸಮುದಾಯಕ್ಕೆ ಸೇರಿದಂತೆ ಯಾವುದಾದರೂ ಯೋಜನೆ ಘೋಷಣೆ ಮಾಡಲು ನಿರ್ಧರಿಸಲಾಗಿದೆ.