ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ನವದೆಹಲಿ: ನೋಟುಗಳ ರದ್ದು ತಪ್ಪಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.
2016ರಲ್ಲಿ ಕೇಂದ್ರ ಸರ್ಕಾರ 500 ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿದ ಕ್ರಮವನ್ನು ಪ್ರಶ್ನಿಸಿ 58 ಅರ್ಜಿಗಳು ಸಲ್ಲಿಕೆಯಾಗಿದ್ದ
ಈ ಕುರಿತು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದು ನೋಟು ಅಮಾನ್ಯೀಕರಣ ತಪ್ಪಲ್ಲ ಎಂದು ತೀರ್ಪು ನೀಡಿದೆ.
ಆರ್‌ಬಿಐ ಒಪ್ಪಿಗೆ ಪಡೆದೇ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ತಜ್ಞರ ಸಲಹೆ ಪಡೆದು ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬಹುದಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ಹಿರಿಯ ವಕೀಲ, ಕಾಂಗ್ರೆಸ್ ನಾಯಕ ಪಿ.ಚಿದಂಬರಂ, ನೋಟುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ, ಸ್ವಯಂ ಯಾವುದೇ ನಿರ್ಧಾರ ತೆಗೆದುಕೊಳ್ಳುವಂತಿಲ್ಲ ಎಂದು ವಾದಿಸಿದ್ದರು.
ಆರ್‌ಬಿಐನ ಕೇಂದ್ರೀಯ ಮಂಡಳಿಯ ಶಿಫಾರಸುಗಳ ಅನ್ವಯದಂತೆ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳಬಹುದು. ಹೀಗಾಗಿ 2016ರಲ್ಲಿ ಕೇಂದ್ರ ಸರ್ಕಾರ ಘೋಷಿಸಿದ ನೋಟು ಅಮಾನ್ಯೀಕರಣ ನೀತಿ ತಪ್ಪು ಎಂದು ವಾದಿಸಿದ್ದರು.
ಮತ್ತೊಂದೆಡೆ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದ ಕೇಂದ್ರ ಸರ್ಕಾರ, ಈ ಪ್ರಕರಣದಲ್ಲಿ ನ್ಯಾಯಾಲಯದ ಮಧ್ಯಪ್ರವೇಶ ಸರಿಯಲ್ಲ ಎಂದು ಹೇಳಿತ್ತು.
ಅಲ್ಲದೆ ನಕಲಿ ನೋಟು ತಡೆ, ಭಯೋತ್ಪಾದನೆಗೆ ಹಣ ಪೂರೈಕೆ ಜಾಲಕ್ಕೆ ಕಡಿವಾಣ, ಕಪ್ಪುಹಣ ಮತ್ತು ತೆರಿಗೆ ವಂಚನೆ ತಡೆಯಲು ಅಪನಗದೀಕರಣ ಘೋಷಿಸಲಾಗಿದೆ. ಇದು ಸಾಕಷ್ಟು ಯೋಚಿಸಿಯೇ ಕೈಗೊಂಡ ನಿರ್ಧಾರ ಎಂದು ಸ್ಪಷ್ಟಪಡಿಸಿತ್ತು.
ನೋಟು ನಿಷೇಧದಿಂದ ನಾಗರೀಕರು ಕೆಲ ಕಾಲ ಸಮಸ್ಯೆಗಳನ್ನು ಎದುರಿಸಿದ್ದರು, ಆದರೆ ದೇಶಕಟ್ಟುವ ಕೆಲಸದಲ್ಲಿ ಇದು ಅನಿವಾರ್ಯ.
ಆದರೆ ಇಂಥ ಸಮಸ್ಯೆಗಳನ್ನು ಬಳಿಕ ಲಭ್ಯ ವ್ಯವಸ್ಥೆಯ ಮೂಲಕ ಪರಿಹರಿಸಲಾಯಿತು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು.