ಜನರಿಂದ ಹೆಚ್ಚಿದ ಒತ್ತಡ; ಹಿರಿಯ ಅಧಿಕಾರಿಗಳ ಜತೆ ಸಿಎಂ ಸರಣಿ ಸಭೆ
ಬೆಂಗಳೂರು: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಂತೆ ಐದು ಗ್ಯಾರಂಟಿಗಳ ಯೋಜನೆಗಳನ್ನು ಜಾರಿಗೆ ತರುವ ಕುರಿತು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಇಂದು ವಿಶೇಷ ಸರಣಿ ಸಭೆಗಳನ್ನು ನಡೆಸಿದರು.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿನ ಶಕ್ತಿಸೌಧದಲ್ಲಿ ಸಿದ್ದರಾಮಯ್ಯ ಅವರು ಐದು ಇಲಾಖೆಗಳ ಅಧಿಕಾರಿಗಳೊಂದಿಗೆ ಬೆಳಗ್ಗೆ ಸಭೆ ನಡೆಸಿ 5 ಗ್ಯಾರಂಟಿ ಯೋಜನೆಗಳಿಗೆ ಫಲಾನುಭವಿಗಳನ್ನು ಗುರುತಿಸುವ ಕುರಿತು ಮಾಹಿತಿ ಪಡೆದರು.
ಇಂಧನ, ಸಾರಿಗೆ, ಆಹಾರ ಮತ್ತು ನಾಗರೀಕ ಸರಬರಾಜು, ಕೌಶಲ್ಯಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದರು.ಜೂನ್ 1ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಅಲ್ಲಿ ಪಂಚ ಗ್ಯಾರಂಟಿಗಳ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಿ ಜಾರಿ ಮಾಡಲು ಅಧಿಕೃತ ಮುದ್ರೆ ಒತ್ತುವ ಸಾಧ್ಯತೆ ಇದೆ.
ಕಾಂಗ್ರೆಸ್ ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ 200 ಯೂನಿಟ್ ಉಚಿತ ವಿದ್ಯುತ್, ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಮನೆಯ ಸದಸ್ಯರಿಗೆ ತಲಾ ಹತ್ತು ಕೆಜಿ ಅಕ್ಕಿ ಮತ್ತು ಪದವೀಧರ ನಿರುದ್ಯೋಗಿಗಳಿಗೆ 3000 ಮತ್ತು ಡಿಪ್ಲೋಮಾ ಪದವಿದರರಿಗೆ ಎರಡು ವರ್ಷಗಳವರೆಗೆ 1,500 ರೂ., ಮನೆಯ ಯಜಮಾನಿಗೆ 2000 ರೂ. ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿತ್ತು.
ಸರಕಾರ ಅಧಿಕಾರಕ್ಕೆ ಬಂದು 15 ದಿನಗಳಾದರೂ ಯಾವುದೇ ಗ್ಯಾರಂಟಿ ಯೋಜನೆಗಳು ಜಾರಿಯಾಗದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ ಇವುಗಳನ್ನು ಜಾರಿಗೆ ತರಲು ಸಮರೋಪಾದಿಯಲ್ಲಿ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಸೇರಿದಂತೆ ಐದೂ ಇಲಾಖೆಗಳ ಕಾರ್ಯದರ್ಶಿಗಳು, ಅಧಿಕಾರಿಗಳು ಸಭೆಗಳಲ್ಲಿ ಉಪಸ್ಥಿತರಿದ್ದರು.
ಕೊಟ್ಟ ಮಾತಿನಂತೆ ಗ್ಯಾರಂಟಿ ಜಾರಿ: ಡಿಕೆಶಿ
ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆಶಿ, ಮುಖ್ಯಮಂತ್ರಿಗಳು ಹಣಕಾಸು ಸಚಿವಾಲಯ ಜವಾಬ್ದಾರಿ ಹೊತ್ತಿದ್ದಾರೆ. ಅವರು ಈಗಾಗಲೇ ಅಧಿಕಾರಿಗಳಿಂದ ಎಲ್ಲಾ ಆಯಾಮಗಳ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದರು.
ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ ಎಂದು ಡಿಕೆಶಿ ಭರವಸೆ ನೀಡಿದರು.
ಯುವಕರು, ಮಹಿಳೆಯರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡುತ್ತಿದ್ದು, ನಾನು ಕೂಡ ನನ್ನ ಸಚಿವಾಲಯಗಳ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.