ರಾಜ್ಯ ಸರಕಾರದ ಸುತ್ತೋಲೆ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ 5, 8, 9 ಹಾಗೂ 11ನೇ ತರಗತಿಗಳಿಗೆ ರಾಜ್ಯ ಸರಕಾರ ನಡೆಸಲು ಉದ್ದೇಶಿದ್ದ ಪಬ್ಲಿಕ್ ಪರೀಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರದಂದು ರದ್ದುಪಡಿಸಿದೆ.
ಮಕ್ಕಳ ಕಲಿಕೆಗೆ ಅನುಕೂಲ ಎಂಬ ಉದ್ದೇಶದಿಂದ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರ ಜಂಟಿಯಾಗಿ ಹೊರಡಿಸಿದ್ದ ಬೋರ್ಡ್ ಪರೀಕ್ಷೆ ಸುತ್ತೊಲೆಯನ್ನು ಹೈಕೋರ್ಟ್ ರದ್ದು ಮಾಡಿದೆ.
ಸರಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.
ಸರಕಾರದ ಆದೇಶ ರದ್ದು
ಕೋವಿಡ್ ನಂತರದ ದಿನಗಳಲ್ಲಿ ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಗೂ ಮುನ್ನ ನಾಲ್ಕು ಹಂತಗಳಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ಸರಕಾರ ತೀರ್ಮಾನ ಕೈಗೊಂಡು ಆದೇಶ ಹೊರಡಿಸಿತ್ತು.
ಇದುವರೆಗೂ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗಷ್ಟೇ ಬೋರ್ಡ್ ಪರೀಕ್ಷೆಗಳು ನಡೆಯುತ್ತಿದ್ದವು.ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಸಂಸ್ಥೆಗಳನ್ನು ನಡೆಸಲು ಹಾಗೂ ವಿದ್ಯಾರ್ಥಿಗಳನ್ನು ಆಕರ್ಷಿಸಲು ಶ್ರೇಣೀಕೃತ ತೇರ್ಗಡೆ ನೀಡುತ್ತಿದ್ದವು.
ಸರಕಾರಿ ಅನುದಾನಿತ, ಸರ್ಕಾರಿ ಶಾಲೆಗಳ ಜೊತೆಗೆ ಖಾಸಗಿ ಅನುದಾನರಹಿತ ಶಾಲೆಗಳ ಮಕ್ಕಳು ಕೆಲವು ಘಟ್ಟಗಳಲ್ಲಿ ಬೋರ್ಡ್ ಪರೀಕ್ಷೆ ಬರೆಯಬೇಕೆಂದು ಸರ್ಕಾರ ತೀರ್ಮಾನ ಕೈಗೊಂಡಿತ್ತು.
ಕಲಿಕೆಯಲ್ಲಿ ಗಂಭೀರತೆ ಅಭಿಪ್ರಾಯ
ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದರಿಂದ ಅವರ ಕಲಿಕೆಯಲ್ಲಿ ಗಂಭೀರತೆ ಕಾಣಬಹುದೆಂಬ ಅಭಿಪ್ರಾಯ ಹೊಂದಿತ್ತು. ರಾಜ್ಯ ಸರಕಾರ ಕಳೆದ ಡಿಸೆಂಬರ್‌ನಲ್ಲಿ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಕೋರ್ಟ್ ಮೆಟ್ಟಿಲೇರಿತ್ತು.
ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಸರಕಾರದ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ.
ಪರೀಕ್ಷೆ ಸುತ್ತೋಲೆಯನ್ನು ಹೈಕೋರ್ಟ್ ರದ್ದುಗೊಳಿಸಿರುವುದರಿಂದ ಸರಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದ್ದು, ತಕ್ಷಣಕ್ಕೆ ಮೇಲ್ಮನವಿ ಸಲ್ಲಿಸಿ ಪರೀಕ್ಷೆ ನಡೆಸುವ ಸಾಧ್ಯತೆ ಕಡಿಮೆ ಇರುವುದರಿಂದ ಈ ವರ್ಷದ ಮಟ್ಟಿಗೆ 5, 8, 9 ಹಾಗೂ 11ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ಸಾಧ್ಯತೆ ಇಲ್ಲ, ಅಲ್ಲದೆ, 9 ನೇ ತರಗತಿವರೆಗೆ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ ಪದ್ಧತಿಯೂ ಇಲ್ಲ.ಈಗ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಗೆ ಮಾತ್ರ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ.