ಚಿಕ್ಕಬಳ್ಳಾಪುರ ಜಿಲ್ಲಾ ಮುಖಂಡರೊಂದಿಗೆ ಸಮಾಲೋಚನೆ
ಮೇಲ್ಮನೆ ಚುನಾವಣೆ ಸಮನ್ವಯದ ಬಗ್ಗೆಯೂ ಚರ್ಚೆ
ಬೆಂಗಳೂರು: ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಸದ್ಯ ಘೋಷಣೆಯಾಗಿರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲಾ ಅವರು ಘಟಕಗಳ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆಗಳನ್ನು ಕರೆದು ಚರ್ಚೆ ನಡೆಸುತ್ತಿದ್ದಾರೆ.
ಇದರ ಆರಂಭದ ಭಾಗವಾಗಿ ಸೋಮವಾರ ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮುಖಂಡರನ್ನು ಕರೆದು ಸಚಿವರು ಮಾತುಕತೆ ನಡೆಸಿದರು.
ಸಂಘಟನೆಯ ಜೊತೆಗೆ ಮುಂಬರುವ ಚುನಾವಣೆಗಳನ್ನು ಎದುರಿಸುವ ನಿಟ್ಟಿನಲ್ಲಿ ಸಚಿವರು ಜಿಲ್ಲಾ ಮುಖಂಡರೊಂದಿಗೆ ಚರ್ಚೆ ನಡೆಸಿದರಲ್ಲವೇ; ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧ ಮಾಡುವಂತೆ ಜಿಲ್ಲಾ ಅಧ್ಯಕ್ಷರಿಗೆ ಸೂಚಿಸಿದರು.
ಅಲ್ಲದೆ ಜಿಲ್ಲಾಮಟ್ಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಸಂಬಂಧಗಳು ಹೇಗಿವೆ? ಹಾಗೂ ಎರಡು ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ಸಮನ್ವಯತೆ ಯಾವ ರೀತಿಯಲ್ಲಿದೆ ಎಂಬ ಬಗ್ಗೆ ಸಚಿವರು ಜಿಲ್ಲಾ ಅಧ್ಯಕ್ಷರು ಹಾಗೂ ಮುಖಂಡರುಗಳಿಂದ ಮಾಹಿತಿಯನ್ನು ಪಡೆದುಕೊಂಡರು.

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿಗಳು ಕಣದಲ್ಲಿದ್ದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿಯೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಸಚಿವರು ಸೂಚಿಸಿದರು.
ಅಲ್ಲದೆ ಸ್ಥಳೀಯ ಮಟ್ಟದಲ್ಲಿ ಸಂಘಟನೆಗೆ ಮುಖ್ಯವಾಗಿರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚಚುನಾವಣೆಗಳಿಗೆ ಸಿದ್ಧತೆ ನಡೆಸಬೇಕೆಂದು ಸೂಚಿಸಿದ ಸಚಿವ ಕುಮಾರಸ್ವಾಮಿ ಅವರು; ಮುಂದಿನ ಚುನಾವಣೆಗಳಲ್ಲಿ ಅದರಲ್ಲೂ ಪ್ರಮುಖವಾಗಿ ಶಾಸಕರಾಗಬೇಕು ಎಂದು ಬಯಸುವವರು ಸ್ಥಳೀಯ ಮಟ್ಟದ ಚುನಾವಣೆಗಳಲ್ಲಿ ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಜೆಡಿಎಸ್ ಪ್ರಬಲ ಪಕ್ಷವಾಗಿದೆ. ಚಿಕ್ಕಬಳ್ಳಾಪುರ, ಗೌರಿಬಿದನೂರು ಬಾಗೇಪಲ್ಲಿ, ಚಿಂತಾಮಣಿ ಮತ್ತು ಶಿಡ್ಲಘಟ್ಟ ಕ್ಷೇತ್ರಗಳಲ್ಲಿ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಕಾರ್ಯಕರ್ತರ ಪಡೆಯನ್ನು ಹೊಂದಿದೆ. ಹೀಗಾಗಿ ಮುಂದಿನ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಬಹುತೇಕ ಎಲ್ಲಾ ಕಡೆ ಅಧಿಕಾರ ಹಿಡಿಯಬೇಕು ಎಂದು ಸಚಿವರು ಮುಖಂಡರಿಗೆ ತಾಕೀತು ಮಾಡಿದರು.
ಯುವಕರು ಹೆಚ್ಚು ಪ್ರಮಾಣದಲ್ಲಿ ಪಕ್ಷಕ್ಕೆ ಬರುವ ರೀತಿಯಲ್ಲಿ ಮುಖಂಡರು ಕೆಲಸ ಮಾಡಬೇಕು. ವಿದ್ಯಾರ್ಥಿಗಳು ಮತ್ತು ಯುವಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಹೋರಾಟಗಳನ್ನು ಕೈಗೊಳ್ಳಬೇಕು. ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ರೈತರಿಗೆ ಪರಿಹಾರವನ್ನು ನೀಡಿರುವುದಿಲ್ಲ. ಈಗಾಗಲೇ ₹2500 ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆಯಾದರೂ ಇದುವರೆಗೂ ರೈತರಿಗೆ ನಿಧಿ ಇಲ್ಲ. ಈ ವಿಷಯದಲ್ಲಿ ಮುಖಂಡರು ಹೋರಾಟ ಶುರು ಮಾಡಬೇಕೆಂದು ಸಚಿವರು ತಾಕೀತು ಮಾಡಿದರು.
ಸಭೆಯಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮುಖಂಡರು ತಾಲೂಕು ಘಟಕಗಳ ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳೆಲ್ಲರೂ ಭಾಗಿಯಾಗಿದ್ದರು.
ಶಿಡ್ಲಘಟ್ಟ ಶಾಸಕ ಮೇಲೂರು ರವಿ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಮುನಿಯಪ್ಪ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.


















