ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ ಜಾರಿ ನಿರ್ದೇಶನಾಲಯ
ಬೆಂಗಳೂರು: ಇಡೀ ರಾಷ್ಟ್ರದ ಗಮನ ಸೆಳೆದಿದ್ದ ಕರ್ನಾಟಕ ಲೋಕಸೇವಾ ಆಯೋಗ (KPSC) ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ವಿಧಾನಸೌಧ ಪೊಲೀಸರಿಗೆ ದೂರು ನೀಡಿದೆ.
ರಾಜ್ಯ ಹೈಕೋರ್ಟ್ ಆದೇಶದ ಮೇರೆಗೆ ಪೊಲೀಸ್ ದೂರು ನೀಡಿರುವ ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA 66(2) ) ಅಡಿಯಲ್ಲಿ ದೂರು ನೀಡಿರುವ ಇಡಿ, ಇಡೀ ಕೆಪಿಎಸ್ಸಿ ಕರ್ಮಕಾಂಡಕ್ಕೆ ಹೊಸ ಟ್ವಿಸ್ಟ್ ಕೊಟ್ಟಿದೆ.
ಇಡಿ ದೂರನ್ನು ಸ್ವೀಕರಿಸಿರುವ ಪೊಲೀಸರು ಅದನ್ನು ಕಾನೂನು ಪರಿಶೀಲನೆಗೆ ರಾಜ್ಯ ಅಡ್ವೋಕೇಟ್ ಜನರಲ್ ಕಚೇರಿಗೆ ಕಳುಹಿಸಿ ಸಲಹೆ ಪಡೆಯಲು ಮುಂದಾಗಿದೆ.
ಈಗಾಗಲೇ ಇಡಿ RDPR ನೇಮಕಾತಿ ಅಕ್ರಮದ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಿದೆ. ಇನ್ನೊಂದೆಡೆ ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ಆಗಿರುವ ಅಕ್ರಮದ ಬಗ್ಗೆ ವಿಸ್ತೃತವಾಗಿ ಇಡಿ ತನಿಖೆ ಮಾಡುತ್ತಿದೆ.
ಜಾರಿ ನಿರ್ದೇಶನಾಲಯವು (ED) ಬೆಂಗಳೂರಿನ ವಿಧಾನಸೌಧ ಪೊಲೀಸರ ಜತೆಗೆ ವಿಶೇಷ ತನಿಖಾ ತಂಡಕ್ಕೆ (SIT) ಕೂಡ ಅಧಿಕೃತ ದೂರು ನೀಡಿದೆ.
ಪಶುವೈದ್ಯಾಧಿಕಾರಿ ಮತ್ತು ಕೆಎಎಸ್ (KAS) ನೇಮಕಾತಿ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಹಾಗೂ ಉತ್ತರಸೂಚಿ ಸೋರಿಕೆ, ಸಂದರ್ಶನದ ಅಂಕಗಳ ತಿದ್ದುಪಡಿ ಮತ್ತು ಕೋಟ್ಯಂತರ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ನಡೆದಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪಗಳನ್ನು ಮಾಡಿ ಮಹತ್ವದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.
ಈ ಹಗರಣದಲ್ಲಿ ಅಮಾನತುಗೊಂಡಿರುವ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್, ಸದಸ್ಯೆ ಬಿ.ವಿ. ಗೀತಾ, ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮತ್ತು ಬಸವರಾಜ್ ಕನ್ನಾಳೆ ಸೇರಿದಂತೆ ಹಲವರ ವಿರುದ್ಧ ತನಿಖೆ ನಡೆಯುತ್ತಿದೆ. ಇವರೆಲ್ಲರ ವಿರುದ್ಧ ಇಡಿ ತನಿಖೆ ನಡೆಸುತ್ತಿದೆ.
ತನಿಖೆಯ ಬೆಳವಣಿಗೆಗಳು. ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ಈಗಾಗಲೇ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್ಶೀಟ್) ಸಲ್ಲಿಸಿದ್ದು, ಆರೋಪಿಗಳ ಆಸ್ತಿಗಳನ್ನು ಜಪ್ತಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಸ್ಥಳೀಯ ಪೊಲೀಸ್ ತನಿಖೆಗಾಗಿ ವಿಧಾನಸೌಧ ಠಾಣೆ ಮತ್ತು ಎಸ್ಐಟಿಗೆ ದೂರು ಸಲ್ಲಿಸಲಾಗಿದೆ.

















