ಬೆಂಗಳೂರು: ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಗೆದ್ದ ಜೋಶ್‌ನಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಲು ಆದೇಶಿಸಿದ್ದಾರೆ.
ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದು ಇವರಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ. ಹೀಗಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಗಮ ಆರಂಭಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.
ಕಳೆದೆರಡು ದಿನಗಳ ಹಿಂದೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರಕಾರ ಆದೇಶಿಸಿತ್ತು. ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ನೀಡಿದೆ. ಆದರೆ, ಇವೆರಡೂ ಕ್ರಮಗಳ ಹಿಂದೆ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯ ಲೆಕ್ಕಾಚಾರವಿದೆ ಎಂದು ಹೇಳಲಾಗುತ್ತಿದೆ.