ಬೆಂಗಳೂರು: ‘ಚಿಕ್ಕಬಳ್ಳಾಪುರದ ಅಕ್ರಮ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟದಿಂದ 6 ಜನ ಜೀವ ಕಳೆದುಕೊಂಡಿರುವುದಕ್ಕೆ ರಾಜ್ಯ ಸರಕಾರದ ಬೇಜವಾಬ್ದಾರಿಯೇ ಕಾರಣ. ಸರಕಾರದ ಅಸಡ್ಡೆಗೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಒಂದು ತಿಂಗಳಲ್ಲೇ ಎರಡನೇ ಬಾರಿ ಇಂತಹ ದುರ್ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿನ ಸ್ಫೋಟ ಸಮಯದಲ್ಲೇ, ಈ ಸ್ಫೋಟಕಗಳ ನಿರ್ವಹಣೆ, ಸಾಗಣೆ ಬಗ್ಗೆ ಒಂದು ಸುರಕ್ಷಿತ ವ್ಯವಸ್ಥೆ ನಿರ್ಮಿಸಬೇಕು, ನೀತಿ-ನಿಯಮಗಳ ಕಟ್ಟುನಿಟ್ಟು ಪಾಲನೆಗೆ ಕ್ರಮ ಕೈಗೊಳ್ಳಬೇಕು ಎಂದು ನಾನು ಹೇಳಿದ್ದೆ ಎಂದಿದ್ದಾರೆ ಡಿಕೆಶಿ.
ತನ್ನ ಆಂತರಿಕ ಸಮಾಸ್ಯೆಗಳಲ್ಲೇ ಮುಳುಗಿರುವ ಈ ಸರಕಾರಕ್ಕೆ ಇತ್ತ ಗಮನ ಹರಿಸಲು ಸಾಧ್ಯವಾಗಿಲ್ಲ. ಮಾಧ್ಯಮಗಳ ಮುಂದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದು ಬಿಟ್ಟರೆ, ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಕ್ರಮ ಕೈಗೊಂಡಿದ್ದರೆ ಇಂತಹ ದುರಂತ ಮರುಕಳಿಸುತ್ತಿರಲಿಲ್ಲ.
-ಡಿ.ಕೆ.ಶಿವಕುಮಾರ್
ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಎನ್ನುವ ಮಾತು ಹಾಸ್ಯಾಸ್ಪದವಾಗಿದೆ. ಹೇಳಿಕೆ ನೀಡುವ ಸರಕಾರದ ಪ್ರತಿನಿಧಿಗಳು ಜೋಕರ್ಗಳಂತೆ ಕಾಣುತ್ತಿದ್ದಾರೆ. ಇದರ ಪರಿಣಾಮವೇ ಚಿಕ್ಕಬಳ್ಳಾಪುರದಲ್ಲಿ ಆರು ಮುಗ್ಧ ಜೀವಿಗಳ ಬಲಿ ಆಗಿರುವುದು. ಅಕ್ರಮ ಗಣಿಗಾರಿಕೆ ನಿಯಂತ್ರಣ ಮಾಡುತ್ತೇವೆ ಎನ್ನುವ ರಾಜ್ಯ ಸರ್ಕಾರ, ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿಲ್ಲ ಎಂಬುದಕ್ಕೆ ಈ ದುರಂತ ಸಾಕ್ಷಿ. ಈ ಸರ್ಕಾರ ಹೇಳುವುದೊಂದು, ಮಾಡುವುದೊಂದು. ಸರಕಾರ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಜತೆಗೆ ಈ ಘಟನೆಗೆ ಕಾರಣವಾದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ರಾಜ್ಯ ಸರಕಾರ ಇನ್ನಾದರೂ ನಿಜವಾಗಿ ಎಚ್ಚೆತ್ತುಕೊಂಡು, ಅಮಾಯಕ ಜೀವಗಳು ಬಲಿಯಾಗದಂತೆ ನೋಡಿಕೊಳ್ಳಬೇಕು’ ಎಂದು ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.