ವಿದ್ಯಾರ್ಥಿಗಳ ಜತೆಗೆ ಬೋಧಕ & ಸಹಾಯಕ ಸಿಬ್ಬಂದಿಗೆ ಲಸಿಕೆ
ಬೆಂಗಳೂರು: ಪದವಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 12ನೇ ತರಗತಿ ನಂತರ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳು, ಬೋಧಕ ಹಾಗೂ ಸಹಾಯಕ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲು ಸರಕಾರ ನಿರ್ಧರಿಸಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಅವರು, ಸಂಬಂಧಪಟ್ಟ ಅಧಿಕಾರಿಗಳ ಸಮನ್ವಯದೊಂದಿಗೆ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಲಸಿಕೆ ಆಭಿಯಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಆಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಪದವಿ ಕಾಲೇಜುಗಳ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಕಾಲೇಜು ಆರಂಭಕ್ಕೆ ಮೊದಲೇ ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ಹಾಗೂ ಸಹಾಯಕ ಸಿಬ್ಬಂದಿಗೆ ಲಸಿಕೆ ನೀಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದಿರುವ ಅವರು; ಪದವಿ, ಡಿಪ್ಲೊಮೊ ಹಾಗೂ ಐಟಿಐ ಶಿಕ್ಷಣ ಸಂಸ್ಥೆಗಳಲ್ಲಿ ಲಸಿಕೆ ಅಭಿಯಾನ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇವರೆಲ್ಲರೂ ಲಸಿಕೆ ಪಡೆಯಲು ಆಯಾ ಸಂಸ್ಥೆಗಳಲ್ಲಿ ನೀಡಲಾಗುವ ದೃಢೀಕರಣ ಪತ್ರ ಹಾಜರುಪಡಿಸಬೇಕು. ಪ್ರತಿ ಕಾಲೇಜಿನ ಮುಖ್ಯಸ್ಥರು ಹಾಗೂ ಇನ್ನೊಬ್ಬ ಅಧಿಕಾರಿಯನ್ನು ನೋಡೆಲ್ ಅಧಿಕಾರಿಯನ್ನಾಗಿ ನಿಯೋಜನೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಲಸಿಕೀಕರಣಕ್ಕೆ ಪ್ರತ್ಯೇಕ ಮಾರ್ಗಸೂಚಿ (ಎಸ್‌ಒಪಿ) ಇರುತ್ತದೆ. ಅದರಂತೆಯೇ ಲಸಿಕೀಕರಣ ನಡೆಸಲಾಗುವುದು. ಅಲ್ಲದೆ, ನೋಡೆಲ್ ಅಧಿಕಾರಿಗಳು ಆಯಾ ಶಿಕ್ಷಣ ಸಂಸ್ಥೆಯಲ್ಲಿನ ಎಲ್ಲ ಅರ್ಹರಿಗೂ ತಪ್ಪದೇ ಲಸಿಕೆ ಕೊಡಿಸಬೇಕು ಹಾಗೂ ಅದರ ಬಗ್ಗೆ ಖಾತರಿ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.
Lead photo: BNMK photographs