ಬೆಂಗಳೂರು: ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಮತ್ತು ದೋಷರಹಿತವಾಗಿ ನಡೆಸಲು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು ಈ ಬಗ್ಗೆ ಅಗತ್ಯ ಸಲಹೆ ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ದಿನಾಂಕ 19-8- 2021ರಿಂದ 3-9-2021ರವರೆಗೆ ಈ ಪರೀಕ್ಷೆಗಳು ನಡೆಯಲಿದ್ದು; ಇಂದು ಈ ಸಂಬಂಧ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು, ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳು ಅಗತ್ಯ ಎಲ್ಲಾ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದರು.
ರಾಜ್ಯದಲ್ಲಿ ಒಟ್ಟು 5,546 ಕಾಲೇಜುಗಳಿಂದ 18414 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದಕ್ಕಾಗಿ 187 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ 17-08- 2021ರ ಒಳಗೆ ಪೂರ್ವಸಿದ್ಧತೆ ಆಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಖಚಿತ ಮಾಡಿಕೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್ ಪ್ರಕಾರ ಪರೀಕ್ಷೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಪದವಿಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರಾದ ಸ್ನೇಹಲ್ ಸೇರಿ ಇಲಾಖೆಯ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಆಯೋಜಿಸಿದ್ದ ವೀಡಿಯೋ ಕಾನ್ಫರೆನ್ಸ್ʼನಲ್ಲಿ ಭಾಗವಹಿಸಿದ ಸಚಿವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿ ಪರೀಕ್ಷೆ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಗತ್ಯ ಸಲಹೆ ಸೂಚನೆ ನೀಡಿದರು.