ಶ್ರೀ ಚಾಮುಂಡೇಶ್ವರಿ ದೇವಿಗೆ ನಾಗಲಕ್ಷ್ಮಿ ಅಲಂಕಾರ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಎರಡನೇ ಆಷಾಢ ಶುಕ್ರವಾರದ ಸಂಭ್ರಮ ಮನೆ ಮಾಡಿತ್ತು.
ನಾಡ ಅಧಿದೇವತೆಯ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಬೆಳ್ಳಂಬೆಳಗ್ಗೆಯೇ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ಬಂದು ನಿಂತು ತಾಯಿಯ ದರ್ಶನ ಪಡೆದರು.
ಇಂದು ಮುಂಜಾನೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಯಿತು. ಚಾಮುಂಡೇಶ್ವರಿ ದೇವಿಗೆ ಇಂದು ನಾಗಲಕ್ಷ್ಮಿ ಅಲಂಕಾರ ಮಾಡಲಾಗಿತ್ತು.
ಮುಂಜಾನೆಯಿಂದಲೇ ದೇವಿಗೆ ಜಲಾಭಿಷೇಕ, ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು.
ಬೆಳಗ್ಗೆ 5.30ರಿಂದಲೇ ಭಕ್ತರಿಗೆ ತಾಯಿಯ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಯಿತು. ರಾತ್ರಿ 9.30ರವರೆಗೂ ತಾಯಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.
ಕಳೆದ ವಾರದಂತೆ ಇಂದೂ ಕೂಡ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಭಕ್ತರು ಲಲಿತ್ ಮಹಲ್ ಹೆಲಿಪ್ಯಾಡ್ ಬಳಿ ತಮ್ಮ ವಾಹನಗಳನ್ನು ನಿಲ್ಲಿಸಿ ಅಲ್ಲಿಂದ ಜಿಲ್ಲಾಡಳಿತದಿಂದ ಉಚಿತವಾಗಿ ವ್ಯವಸ್ಥೆ ಮಾಡಿರುವ ಬಸ್ ಮೂಲಕ ಬೆಟ್ಟಕ್ಕೆ ತೆರಳಲು ಅವಕಾಶ ಕಲ್ಪಿಸಲಾಗಿದೆ.
ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಏರ್ಪಡಿಸಲಾಗಿದೆ. ದೇವಾಲಯದ ಒಳ ಆವರಣವನ್ನು ವಿವಿಧ ಬಗೆಯ ಪುಷ್ಪಗಳಿಂದ ಸಿಂಗರಿಸಲಾಗಿತ್ತು. ಇಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು; ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಆಯುರಾರೋಗ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು. ರೋಪ್ ವೇ ಕೈಬಿಟ್ಟಿದ್ದು ಒಳ್ಳೆಯ ನಿರ್ಧಾರ. ಇದು ಧಾರ್ಮಿಕ ಸ್ಥಳವಾಗಿರುವುದರಿಂದ ಅದಕ್ಕೆ ಧಕ್ಕೆಯಾಗದ ರೀತಿಯಲ್ಲಿ ನೋಡಿಕೊಳ್ಳುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರೂ ಕೂಡ ಇಂದು ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನವನ್ನು ಪಡೆದರು.
ದೇವಸ್ಥಾನದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ಮಾತನಾಡಿ; ಇಂದು ಬೆಳಿಗ್ಗೆ 3.30ರಿಂದಲೇ ದೇವಿಗೆ ರುದ್ರಾಭಿಷೇಕ, ಪಂಚಾಮೃತಾಭಿಷೇಕ ವಿವಿಧ ಪೂಜಾ ಕೈಂಕರ್ಯ ನೆರವೇರಿಸಲಾಗಿದ್ದು, ದೇವಿಗೆ ನಾಗಲಕ್ಷ್ಮಿ ಅಲಂಕಾರ ಮಾಡಲಾಗಿದೆ. ನವಮಿ ಮೇಲೆಯೇ ದಶಮಿ ಬಂದಿರುವುದು ಬಹಳ ವಿಶೇಷ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆಂಬ ನಿರೀಕ್ಷೆ ಇದೆ. ಸೂಕ್ತವಾಗಿ ಸರ್ಕಾರ ಭಕ್ತಾದಿಗಳಿಗೆ ಎಲ್ಲ ರೀತಿಯಿಂದಲೂ ಅನುಕೂಲ ಮಾಡಿಕೊಟ್ಟಿದ್ದಾರೆ. ಸರ್ಕಾರ ಹೇಳಿದ ನಿಯಮಗಳನ್ನು ಪಾಲಿಸಿ, ಭಕ್ತರು ದರ್ಶನ ಪಡೆಯುವಂತೆ ಮನವಿ ಮಾಡಿದರು.
ಕಳೆದ ಮೂರ್ನಾಲ್ಕು ದಿನಗಳಿಂದ ಎಡೆಬಿಡದೇ ಸುರಿಯುತ್ತಿದ್ದ ಮಳೆರಾಯ ಇಂದು ಕೊಂಚ ಬಿಡುವು ಪಡೆದಿದ್ದಾನೆ. ಅದರಿಂದ ಇಂದು ಚಾಮುಂಡಿಬೆಟ್ಟಕ್ಕೆ ತೆರಳಿ ಭಕ್ತರು ದೇವಿಯ ದರ್ಶನವನ್ನು ಪಡೆಯಲು ಕೂಡ ಅನುಕೂಲವಾಗಿದೆ. ಚಾಮುಂಡಿಬೆಟ್ಟ ಪ್ರವೇಶಿಸುವ ಮುನ್ನವೇ ಭಕ್ತರು ಎರಡೂ ಲಸಿಕೆ ಪಡೆದಿದ್ದಾರೋ ಇಲ್ಲವೋ ಎಂಬುದರ ವರದಿಯನ್ನು ನೋಡಿಯೇ ಬೆಟ್ಟಕ್ಕೆ ಕಳುಹಿಸಲಾಗುತ್ತಿದೆ.