6 ದಿನಗಳ ನಂತರ ಅಂತೂ ಬಂಧನ
ಚಿತ್ರದುರ್ಗ: ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಇಲ್ಲಿನ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಜಿಲ್ಲಾ ಪೊಲೀಸರು ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಮಠದ ವಿದ್ಯಾರ್ಥಿ ನಿಲಯದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ 6 ದಿನಗಳ ನಂತರ ಇದೀಗ ಚಿತ್ರದುರ್ಗ ಪೊಲೀಸರು ಡಾ.ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿದ್ದಾರೆ.
ಕಳೆದ ಅಗಸ್ಟ್ 26ರಂದು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥರು ದೂರು ದಾಖಲಿಸಿದ್ದರು. ಫೋಕ್ಸೋ ಕಾಯ್ದೆ ಅಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ತದ ನಂತರ ಮೈಸೂರು ಪೊಲೀಸರು ಈ ಪ್ರಕರಣವನ್ನು ಚಿತ್ರದುರ್ಗದ ಠಾಣೆಗೆ ವರ್ಗಾಯಿಸಿದ್ದರು.
ಸಿಪಿಐ ಬಾಲಚಂದ್ರ ನಾಯಕ್, ಸಿಪಿಐ ಸತೀಶ್ ಚಂದ್ರನ್ ನೇತೃತ್ವದಲ್ಲಿ ಶ್ರೀಯನ್ನು ಬಂಧಿಸಿದ್ದು, ಅವರನ್ನು ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ಗುರಿಪಡಿಸಲಾಗಿದೆ ಎಂದು ಗೊತ್ತಾಗಿದೆ.
ಶರಣರ ಬಂಧನವನ್ನು ಖಚಿತಪಡಿಸಿರುವ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು; ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶರಣನ್ನು ಬಂಧಿಸಲಾಗಿದೆ. ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು. ನಿಯಮದ ಪ್ರಕಾರ ವೈದ್ಯಕೀಯ ಪರೀಕ್ಷೆ ಮತ್ತು ತನಿಖೆಯನ್ನು ಮಾಡಲಾಗುತ್ತದೆ. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ.