ದ.ಕನ್ನಡ ಜಿಲ್ಲೆಯ 16 ಕಡೆ ಎನ್ ಐ ಎ ದಾಳಿ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದಾಳಿಗೆ ಸಂಚು ಕೇಸಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಮಂಗಳೂರು, ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿ ಎನ್ ಐಎ ದಾಳಿ ನಡೆಸಿದೆ.
ಬಿಹಾರದಲ್ಲಿ ಜುಲೈ 12, 2022 ರಂದು ಪ್ರಧಾನಿ ನರೇಂದ್ರ ಮೋದಿ ಮೇಲೆ ದಾಳಿಗೆ ಸಂಚು ರೂಪಿಸಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದ್ದು, ಸಿಬ್ಬಂದಿ ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ.
ಬಿಹಾರದ ಪಾಟ್ನಾದಲ್ಲಿ ನಡೆದ ರ್ಯಾಲಿಯಲ್ಲಿ ಈಗ ನಿಷೇಧಿತ ಇಸ್ಲಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಹಲ್ಲೆ ನಡೆಸಲು ಯೋಜನೆ ರೂಪಿಸಿತ್ತು ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದ್ದು ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ
ಈ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ಫುಲ್ವಾರಿ ಶರೀಫ್ ಎಂಬುವವನನ್ನು ಬಂಧಿಸಿದ್ದರು. ಕುಕೃತ್ಯಕ್ಕೆ ಸಂಚು ನಡೆಸಲು ದಕ್ಷಿಣ ಕನ್ನಡದಿಂದ ಹಣಕಾಸು ನೆರವು ನೀಡಲಾಗಿದೆ ಎಂಬ ಸತ್ಯ ತನಿಖೆ ವೇಳೆ ಬಹಿರಂಗವಾಗಿತ್ತು.
ಆ ಹಣದ ಜಾಡು ಹಿಡಿದು ಹೊರಟ ಅಧಿಕಾರಿಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಮೂಲಕ ಭಾರತಕ್ಕೆ ಹಣ ಬರುತ್ತಿದೆ, ಇದನ್ನು ಭಾರತದಲ್ಲಿ ಭಯೋತ್ಪಾದನೆ ಎಸಗಲು ಬಳಸಲಾಗುತ್ತಿದೆ ಎಂಬ ಅಂಶವನ್ನು ಪತ್ತೆಹಚ್ಚಿದ್ದಾರೆ.
ಎನ್ಐಎ ಅಧಿಕಾರಿಗಳು ಮತ್ತೆ ದಕ್ಷಿಣ ಕನ್ನಡದ ಹಲವು ಕಡೆ ದಾಳಿ ಮಾಡಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಒದಗಿಸಿರಬಹುದು ಎಂಬ ಗುಮಾನಿಯ ಮೇರೆಗೆ ಬಂಟ್ವಾಳ ಮೂಲದ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಮೊದಲೇ ಬಂಧಿಸಲಾಗಿತ್ತು.