ಮಹಾನಟಿ ಆಗಲಿಕೆಗೆ ಕಂಬನಿ ಮಿಡಿದ ಗಣ್ಯರು
ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದ್ದಾರೆ.
ಪ್ರಧಾನಿ ಮೋದಿ ಅವರು ಕನ್ನಡದಲ್ಲಿಯೇ ಎಕ್ಸ್ ಜಾಲತಾಣದಲ್ಲಿ ಲೀಲಾವತಿ ಅವರ ಗುಣಗಾನ ಮಾಡಿ ಕಂಬನಿ ಮಿಡಿದ್ದಾರೆ.
“ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.” ಎಂದು ಮೋದಿ ಅವರು ಹೇಳಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ. ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು. ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆಗುರುತುಗಳು ಮೂಡುವಂತೆ ಮಾಡಿದವರು ಅವರು. ಅಮ್ಮ, ಅಕ್ಕ, ಅತ್ತೆ ಸೇರಿ ಅನೇಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿ ನಟಿಸುತ್ತಿದ್ದರು. ಭಕ್ತ ಕುಂಬಾರ, ವೀರ ಕೇಸರಿ, ಭಾಗ್ಯದೇವತೆ, ಸೋತು ಗೆದ್ದವಳು, ನಂದಾದೀಪ, ವಿಧಿ ವಿಲಾಸ, ಸಂತ ತುಕಾರಾಂ, ರಣಧೀರ ಕಂಠೀರವ ಸೇರಿ ಅವರು ನಟಿಸಿದ್ದ ಅನೇಕ ಚಿತ್ರಗಳು ಕನ್ನಡಿಗರ ಮನೆ ಮನಗಳನ್ನು ತುಂಬಿರುತ್ತವೆ. ಲೀಲಾವತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.
ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಇತ್ತೀಚೆಗಷ್ಟೇ ಅವರು ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿದ್ದ ಪಶು ಆಸ್ಪತ್ರೆಯನ್ನು ಉದ್ಘಾಟಿಸಿದ್ದೆ. ಸಂಕಷ್ಟದಲ್ಲಿದ್ದರೂ ಸಮಾಜ ಸೇವೆ ಮಾಡಬೇಕೆನ್ನುವ ಅವರ ಕಳಕಳಿ ನನ್ನ ಹೃದಯ ಮುಟ್ಟಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಪುತ್ರ ವಿನೋದ್ ರಾಜ್ ಕುಟುಂಬವರ್ಗದವರು ಹಾಗೂ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿ ಎಂದಿದ್ದಾರೆ ಡಿಸಿಎಂ ಡಿ.ಕೆ.ಶಿವಕುಮಾರ್.