ಕೇರಳದಲ್ಲಿ 1,324 ಜನರಿಗೆ ಕೋವಿಡ್; ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರಕಾರ ಸೂಚನೆ
ಬೆಂಗಳೂರು: ಕೇರಳದಲ್ಲಿ ಕೊರೋನಾ ರುಪಾಂತರಿ ಜೆಎನ್.1 ಪತ್ತೆಯಾಗಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸರಕಾರ ಕೊಡಗು ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಭೋಸರಾಜು ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಇಂದು ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.
ಕೊಡಗು ಜಿಲ್ಲೆಗೆ ಗಡಿ ಹೊಂದಿಕೊಂಡಿರುವ ಕೇರಳ ರಾಜ್ಯದಲ್ಲಿ ರೂಪಾಂತರಿ ಕರೋನಾ ಪತ್ತೆಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಆರೋಗ್ಯ ಇಲಾಖೆಯು ಸನ್ನದ್ದವಾಗಿದ್ದು ಎಲ್ಲಾ ರೀತಿಯ ಪರಿಸ್ಥಿತಿಗಳನ್ನ ನಿಭಾಯಿಸಲು ಸಜ್ಜಾಗಿರಬೇಕು. ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆಯೂ ಕ್ರಮಗಳನ್ನ ಕೈಗೊಳ್ಳಬೇಕು.
ಕೊರೋನಾ ಪ್ರಕರಣಗಳು ಕಂಡು ಬಂದಲ್ಲಿ ನಿಯಮಾನುಸಾರ ಅಗತ್ಯ ಚಿಕಿತ್ಸೆಯನ್ನು ಹಾಗೂ ಇನ್ನುಳಿದ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು. ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದೆ. ಈ ಹಿನ್ನಲೆಯಲ್ಲಿ ಈಗಿನಿಂದಲೇ ಅಗತ್ಯ ವ್ಯವಸ್ಥೆಗಳನ್ನ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.
ಆರೋಗ್ಯ ಇಲಾಖೆ ಸನ್ನದ್ಧ
ಇನ್ನೊಂಡು ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಹೊಸ ತಳಿಯ ಬಗ್ಗೆ ಕಟ್ಟೆಚ್ಚರ ವಹಿಸಿದೆ. ರಾಜ್ಯದಲ್ಲಿ ಪರೀಕ್ಷೆ ಹೆಚ್ಚಳ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ಕರೆದು ಅವರು ಈಗಾಗಲೇ ಚರ್ಚೆ ನಡೆಸಿದ್ದಾರೆ. ಕಳೆದ ಒಂದು ತಿಂಗಳಿಂದ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಕೋವಿಡ್ ಲಕ್ಷಣಗಳು ಕಂಡು ಬಂದ ಕೂಡಲೇ ಪರೀಕ್ಷೆ ಮಾಡುತ್ತೇವೆ ಎಂದು ತಿಳಿಸಿದ್ದರು.
ಈಗಾಗಲೇ ಮೂರು ತಿಂಗಳಿಗೆ ಬೇಕಾಗುವಷ್ಟು ಕೊವಿಡ್ ಟೆಸ್ಟ್ ಕಿಟ್ ಖರೀದಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಕೇರಳದಲ್ಲಿ 1,324 ಜನರಿಗೆ ಕೋವಿಡ್
ಕೇರಳದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಹೊಸ ತಳಿ ಉಲ್ಬಣಗೊಳ್ಳುತ್ತಿದೆ. ಸದ್ಯಕ್ಕೆ ಆ ರಾಜ್ಯದಲ್ಲಿ 1,324 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಪ್ರತಿದಿನ 700ರಿಂದ 1,000 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಕೇರಳದಲ್ಲಿ ಕಳೆದ 10 ದಿನಗಳಲ್ಲಿ ರಾಜ್ಯದಲ್ಲಿ ಮೂರು ಕೊರೊನಾ ಕಾರಣದಿಂದ ಸಾವುಗಳ ಸಂಭವಿಸಿವೆ.
Comments 1