ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷೆ ಸಮಯ ನಿಗದಿ; ಕೋರ್ಟ್ ಆದೇಶದಂತೆ ಸಮವಸ್ತ್ರ ನಿಯಮ ಪಾಲನೆ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಏಪ್ರಿಲ್ 6 ರೊಳಗೆ ಪೂರ್ಣಗೊಳಿಸಲು ರಾಜ್ಯ ಸರಕಾರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿಂದು ವೇಳಾಪಟ್ಟಿ ಪ್ರಕಟಿಸಿ, ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡುವುದಾಗಿ ಸ್ಪಷ್ಟಪಡಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 22 ರವರೆಗೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದೆ.
ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್‌ಎಸ್‌ಎಲ್‌ಸಿ, 6,98,624 ಮಕ್ಕಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಾರೆ. ಒಟ್ಟಾರೆ 2,741 ಪರೀಕ್ಷಾ ಕೇಂದ್ರಗಳಿರುತ್ತವೆ.
ಎಸ್‌ಎಸ್‌ಎಲ್‌ಸಿಯಲ್ಲಿ 20 ಅಂಕಗಳಿಗೆ ಆಂತರಿಕ ಪರೀಕ್ಷೆ ನಡೆಯಲಿದೆ, ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ ಕಳೆದ ವರ್ಷದಂತೆ 80-20 ಅಂಕಗಳ ಮಾದರಿಯಲ್ಲಿರುತ್ತದೆ.
ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ, ಇನ್ನುಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ ಎಂದರು.
ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಪ್ರಮುಖ ಘಟ್ಟವಾಗಿರುವ ಎರಡೂ ಪರೀಕ್ಷೆಗಳ ಫಲಿತಾಂಶ ಏಪ್ರಿಲ್ ಕೊನೆ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದರು.